SUDDIKSHANA KANNADA NEWS/ DAVANAGERE/ DATE:04-03-2025
ದಾವಣಗೆರೆ: ಜಿಲ್ಲೆಯಲ್ಲಿ ಒಟ್ಟು 172 ಮಾಂಸದ ಕೋಳಿ ಫಾರಂಗಳಲ್ಲಿ 97 ಕಾರ್ಯನಿರ್ವಹಿಸುತ್ತಿವೆ.
ಇವುಗಳಲ್ಲಿ 498825 ಅಂದಾಜು ಬ್ರಾಯ್ಲರ್ ಕೋಳಿಗಳಿವೆ. ಹಾಗೂ 31 ಮೊಟ್ಟೆ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ 2473435 ಕೋಳಿಗಳಿವೆ.
ಈ ಕೇಂದ್ರಗಳಲ್ಲಿ ಕೋಳಿಗಳು ಮರಣಹೊಂದಿದಲ್ಲಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಎಲ್ಲಾ ಫಾರಂಗಳ ಮಾಲಿಕರಿಗೆ ಸೂಚನೆ ನೀಡಲಾಗಿದೆ. ಯಾವುದೇ ಫಾರಂಗಳಲ್ಲಿ ಕೋಳಿಗಳ ಮರಣ ಹೊಂದಿದಲ್ಲಿ ತಕ್ಷಣ ಪಶುಸಂಗೋಪನಾ ಇಲಾಖೆ ಗಮನಕ್ಕೆ ತಂದು, ಈ ಹಕ್ಕಿಜ್ವರ ಹರಡದಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ:
ಹಕ್ಕಿ ಜ್ವರದ ನಿಯಂತ್ರಣ ಮಾರ್ಗಸೂಚಿಯಂತೆ ಕಟ್ಟೆಚ್ಚರ ವಹಿಸಲು ಜಿಲ್ಲೆಯ ವಿವಿಧ ತಾಲ್ಲೂಕುಗಳ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಿ ಸೂಕ್ತ ಮಾರ್ಗದರ್ಶನ ನೀಡಲು ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಕ್ರಮ ಜರುಗಿಸಲು ಪಶುವೈದ್ಯಾಧಿಕಾರಿಗಳ ನೇತೃತ್ವದಲ್ಲಿ 38 ಕ್ಷೀಪ್ರ ಪ್ರತಿಕ್ರಿಯೆ ತಂಡ (ರಾಪಿಡ್ ರೆಸ್ಪಾನ್ಸ್ ಟೀಮ್) ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ; ಸುರೇಶ್ ಬಿ.ಇಟ್ನಾಳ್ ಮಾತನಾಡಿ, ಜಿಲ್ಲೆಯಲ್ಲಿ ಕೋಳಿ, ಬಾತುಕೋಳಿ, ವಲಸೆ ಬರುವ ಹಕ್ಕಿಗಳಲ್ಲಿ ಅಸಹಜ ಸಾವು ಉಂಟಾದಲ್ಲಿ ಕೂಡಲೇ ಹತ್ತಿರದ ಪಶು ವೈದ್ಯಕೀಯ ಇಲಾಖೆಗೆ ಮಾಹಿತಿ ನೀಡಬೇಕು. ಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಾಣಿಕಾ ಕೇಂದ್ರಗಳ ಮಾಲೀಕರಿಗೆ ಕೋಳಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ತಕ್ಷಣವೇ ಪಶು ಪಾಲನಾ ಇಲಾಖೆಗೆ ತಿಳಿಸುವಂತೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಅಂಗಡಿಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ; ಮಹೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.