SUDDIKSHANA KANNADA NEWS/ DAVANAGERE/ DATE:10-01-2024
ದಾವಣಗೆರೆ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಜೈಲು ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ಕೂಲಿ ಕೆಲಸ ಮಾಡುತ್ತಿದ್ದ ಪಾಪಣ್ಣ (21) ಶಿಕ್ಷೆಗೊಳಪಟ್ಟ ಅಪರಾಧಿ. ಅಪ್ರಾಪ್ತೆಯ ತಂದೆ ಮಹಿಳಾ ಠಾಣೆಗೆ ಬಂದು ತನ್ನ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದರು. ಆ ಬಳಿಕ ತನಿಖೆ ಕೈಗೊಂಡು ಬಾಲಕಿ ಪತ್ತೆ ಹಚ್ಚಲಾಗಿತ್ತು.
ಪಾಪಣ್ಣ ಎಂಬಾತನು ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದರೂ ಸಹ ಮದುವೆಯಾಗುವುದಾಗಿ ನಂಬಿಸಿ, ಪುಸಲಾಯಿಸಿ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿತ್ತು. ತನಿಖಾಧಿಕಾರಿ ಶಿಲ್ಪಾ ವೈ. ಎಸ್. ಅವರು ಪೋಕ್ಸೋ ಕೇಸ್ ದಾಖಲಿಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು.
ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ-1 ನ್ಯಾಯಾಲಯವು ವಿಚಾರಣೆ ನಡೆಸಿತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀಪಾದ್ ಎನ್. ಅವರು ಪ್ರಕರಣದ ಆರೋಪಿ ದುಗ್ಗೇಶನಿಗೆ 20 ವರ್ಷ ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿದೆ. ಸಂತ್ರಸ್ಥೆಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ಸಂತ್ರಸ್ತೆ ಪರ ವಾದ ಮಂಡಿಸಿದ್ದರು.
ಈ ಪ್ರಕರಣದಲ್ಲಿ ತನಿಖೆ ಕೈಗೊಂಡು ಆರೋಪಿಗೆ ಶಿಕ್ಷೆ ವಿಧಿಸಲು ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಶಿಲ್ಪಾ ವೈ.ಎಸ್. ಹಾಗೂ ನ್ಯಾಯ ಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ಅವರನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ, ಮಂಜುನಾಥ ಜಿ. ಅವರು ಶ್ಲಾಘಿಸಿದ್ದಾರೆ.











