SUDDIKSHANA KANNADA NEWS/ DAVANAGERE/ DATE:13-03-2025
ಬೆಂಗಳೂರು: ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ತಿಳಿಸಿದ್ದಾರೆ.
ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳು ಪರಿಶೀಲನೆಯ ಹಂತದಲ್ಲಿದ್ದು, ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯ ಅಧಿಕಾರಿಗಳ ಖಾಲಿ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಜಾಲವನ್ನು ಹತ್ತಿಕ್ಕಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಔಷಧ ಮಾರಾಟಗಾರರ ವಿರುದ್ಧ ಕಾರ್ಯಾಚರಣೆ ನಡೆಸಿ 2023-24ನೇ ಸಾಲಿನಲ್ಲಿ 10 ಮೊಕದ್ದಮೆಗಳನ್ನು ಹಾಗೂ 2024-25ನೇ ಸಾಲಿನಲ್ಲಿ 5 ಮೊಕದ್ದಮೆಗಳನ್ನು ಔಷಧ ಮತ್ತು ಕಾಂತಿವರ್ಧಕ ನಿಯಮಾವಳಿಗಳ ಅಡಿಯಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಹಾಗೂ 87 ಫಾರ್ಮಸಿಗಳನ್ನು ವಜಾ ಮಾಡಿ 3 ಪಾರ್ಮಸಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.