SUDDIKSHANA KANNADA NEWS/ DAVANAGERE/ DATE:23-11-2024
ಬೆಂಗಳೂರು: ಸಮೀಕ್ಷೆಗಳು ತಲೆಕೆಳಗಾಗುತ್ತವೆ ಅಂತ ನಾನು ಹೇಳಿದ್ದೆ. ಅದರಂತೆ ಆಗಿದೆ. ಮೂರಕ್ಕೆ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ವಿಜಯ ಸಾಧಿಸಿ 2028ಕ್ಕೆ ಮುನ್ನುಡಿ ಬರೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜನರು ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.
ಗ್ಯಾರಂಟಿ ಮತ್ತು ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಜನರು ಮತ ನೀಡಿದ್ದಾರೆ. ಸಮೀಕ್ಷೆಗಳು ಸುಳ್ಳಾಗುತ್ತವೆ ಅಂತ ನಾನು ನಿನ್ನೆ ಸಂಜೆಯೇ ಹೇಳಿದ್ದೆ. ನಾವು ಮಾಡುವ ಸಮೀಕ್ಷೆಯೇ ಬೇರೆ ಅಂತ ಕೂಡ ಹೇಳಿದ್ದೆ. ಹೆಚ್ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದ ಸಂಸದರಾಗಿದ್ದಾರೆ. ಇದಲ್ಲದೆ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ಅಧಿಕಾರದ ಆಸೆಗೆ ಚನ್ನಪಟ್ಟಣ ಕ್ಷೇತ್ರವನ್ನು ಕೈಬಿಟ್ಟಿದ್ದಕ್ಕೆ ಜನ ಉತ್ತರ ನೀಡಿದ್ದಾರೆ. ಶಿಗ್ಗಾಂವಿಯಲ್ಲಿ ಭರತ್ ಸೋಲು ಅನ್ನೋದು ಹೇಳಲ್ಲ. ಅಲ್ಲಿ ಈ ಹಿಂದೆ ನಮ್ಮ ಅಭ್ಯರ್ಥಿ ಸೋತಿದ್ದರು. ಈಗ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಸಂಡೂರಿನಲ್ಲೂ ನಾವು ಗೆದ್ದಿದ್ದೇವೆ. ಈ ಮೂರು ಚುನಾವಣೆ ನಮ್ಮ ಗ್ಯಾರಂಟಿ ಮತ್ತು ಅಭಿವೃದ್ಧಿಗೆ ಕೈಗನ್ನಡಿಯಾಗಿದೆ ಎಂದು ಹೇಳಿದರು.
ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ- ಸವಣೂರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯಭೇರಿ ಬಾರಿಸಿದ್ದು, ಗೆಲುವು ಸಾಧಿಸಿದ ಮೂವರಿಗೂ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಈ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಪ್ರತಿಪಾದಿಸಿದರು.