SUDDIKSHANA KANNADA NEWS/ DAVANAGERE/ DATE:08-02-2024
ದಾವಣಗೆರೆ: ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ ಹಾಗೂ ಜಗಳೂರು ನ್ಯಾಯಾಲಯಗಳ ಆವರಣದಲ್ಲಿ ಮಾ.9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸುವ ಮೂಲಕ ರಾಜಿಯಾಗಬಲ್ಲ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ಅವರು ಹೇಳಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಲಾಗುತ್ತಿದೆ. ಅಂದು ಸುಮಾರು 5 ಸಾವಿರ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ಈಗಾಗಲೆ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಅರ್ಹವಾಗಿರುವ ಕ್ರಿಮಿನಲ್ ಪ್ರಕರಣಗಳು, ಚೆಕ್ಬೌನ್ಸ್ ಪ್ರಕರಣ, ಪರಿಹಾರ ಹಣ ವಸೂಲಾತಿ ಕುರಿತ ಪ್ರಕರಣಗಳನ್ನು ಗುರುತಿಸಲಾಗಿದೆ. ವಿಶೇಷವೆಂದರೆ ಬಾಕಿ ಇರುವ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣಗಳನ್ನೂ ಕೂಡ ಲೋಕ್ ಅದಾಲತ್ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯಥಪಡಿಸಲು ಅವಕಾಶ ಒದಗಿಸಲಾಗಿದೆ. ಇದರಿಂದಾಗಿ ಕಡಿಮೆ ಸಮಯದಲ್ಲಿ ವೆಚ್ಚ ರಹಿತವಾಗಿ ವ್ಯಾಜ್ಯಗಳು ಇತ್ಯರ್ಥಗೊಳ್ಳಲಿದ್ದು, ಸಮಾಜದಲ್ಲಿ ಉತ್ತಮ ಬಾಂಧವ್ಯ ಮೂಡಲು ಲೋಕ್ಅದಾಲತ್ ಸಹಕಾರಿಯಾಗಿದೆ ಎಂದರು.
ಕಳೆದ ಡಿಸೆಂಬರ್ 9 ರಂದು ನಡೆದ ರಾಷ್ಟ್ರೀಯ ಲೋಕ್ಅದಾಲತ್ನಲ್ಲಿ ಜಿಲ್ಲೆಯಲ್ಲಿ ಒಟ್ಟು 4233 ಪ್ರಕರಣಗಳು ಇತ್ಯರ್ಥಗೊಡಿವೆ. ಇದರಲ್ಲಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಜೀವ ವಿಮಾ ನಿಗಮ ಅಧಿಕಾರಿಗಳು, ವಕೀಲರು, ಎಂ.ವಿ.ಸಿ ಪ್ರಕರಣದ ಅರ್ಜಿದಾರ ವಕೀಲರುಗಳು, ಭೂ ವಿಜ್ಞಾನ ಇಲಾಖೆ, ಬ್ಯಾಂಕ್ ಅಧಿಕಾರಿಗಳು, ಶಿಕ್ಷಣ ಇಲಾಖೆ ಸೇರಿದಂತೆ ಲೋಕ್ ಅದಾಲತ್ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುತ್ತೇವೆ ಎಂದರು.
ಬರುವ ಮಾರ್ಚ್ 9 ರಂದು ಮತ್ತೊಮ್ಮೆ ರಾಷ್ಟ್ರೀಯ ಲೋಕ್ ಅದಾಲತ್ ಮೂಲಕ ಅತೀ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಪ್ರಾದಿಕಾರ ಉದ್ದೇಶಿಸಿದೆ. ಎಲ್ಲಾ ನ್ಯಾಯಾಲಯಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ನ್ನು ಮಾ.9 ರಂದು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಪ್ರಸ್ತುತ 38500 ಪ್ರಕರಣಗಳು ಬಾಕಿ ಇದ್ದು, ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಲೋಕ್ ಅದಾಲತ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್ ಕಾಯ್ದೆಯಡಿ ಪ್ರಕರಣಗಳನ್ನು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ಪರಿಹರಿಸಿಕೊಳ್ಳಬಹುದು. ರಾಜಿಯಾಗಬಹುದಾದ ಅಕ್ರಮ ಮರಳುಗಾರಿಕೆಯ ಪ್ರಕರಣಗಳು, ವಿಮೆಗೆ ಸಂಬಂಧಪಟ್ಟ ಪ್ರಕರಣಗಳನ್ನೂ ಕೂಡ ಲೋಕ್ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.
ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ,
ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯದ ಸಂಪೂರ್ಣ ಶುಲ್ಕವನ್ನು ಮರುಪಾವತಿ ಮಾಡಲಾಗುವುದು. ಕಕ್ಷಿದಾರರು ಭೌತಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮುಖಾಂತರ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಮಾತನಾಡಿ, ಮಾ.9 ರಂದು ಜಿಲ್ಲೆಯಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರೀಯ ಲೋಕ್ ಅದಾಲತ್ ಕುರಿತಂತೆ ಪೊಲೀಸ್ ಇಲಾಖೆಯೊಂದಿಗೆ ಈಗಾಗಲೆ ಪೂರ್ವಭಾವಿ ಸಭೆ ನಡೆಸಿ, ರಾಜಿಯಾಗಬಹುದಾದ ಪ್ರಕರಣಗಳನ್ನು ಗುರುತಿಸಿ, ಇತ್ಯರ್ಥಕ್ಕೆ ಸಹಕಾರ ನೀಡುವಂತೆ ಸೂಚನೆ ನೀಡಲಾಗಿದೆ. ಲೋಕ್ ಅದಾಲತ್ ಕುರಿತು ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕಿರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂ.ಸ:08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ 08192-296885, ಹೊನ್ನಾಳಿ 08188-251732, ಚನ್ನಗಿರಿ 08189-229195 ಮತ್ತು ಜಗಳೂರು 08196-227600 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದರು.
ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣಕುಮಾರ್.ಎಲ್.ಹೆಚ್, ಕಾರ್ಯದರ್ಶಿ ಬಸವರಾಜ್.ಎಸ್ ಹಾಗೂ ಜಂಟಿ ಕಾರ್ಯದರ್ಶಿ ಮಂಜುನಾಥ ಹಾಗೂ ಉಪಸ್ಥಿತರಿದ್ದರು.