ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆ ಆಡಿಯೋ ಮೂಲಕ ಬೆದರಿಕೆ ಹಾಕಿದ್ದು, ಸಿಎಂ ಯೋಗಿ ಸರ್ಕಾರ ಎಚ್ಚೆತ್ತುಕೊಂಡಿದೆ.
ರಾಮಮಂದಿರ ಸುತ್ತ ಹೆಚ್ಚಿನ ಭದ್ರತೆ ನಿಯೋಜನೆ ಮಾಡಿ ಶಂಕಿತರ ಮೇಲೆ ನಿಗಾ ಇರಿಸಿದೆ. ರಾಮ ಮಂದಿರದ ಜೊತೆಗೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದಲ್ಲೂ ಭದ್ರತಾ ವ್ಯವಸ್ಥೆ ಹೆಚ್ಚಿಸಲಾಗಿದೆ. ಅಯೋಧ್ಯೆಯಲ್ಲಿ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಸೇರಿದೆ.
ರಾಮ ಮಂದಿರದ ಹೊರತಾಗಿ ಪ್ರಮುಖ ಸ್ಥಳಗಳಿಗೂ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಜೈಶ್-ಎ-ಮೊಹಮ್ಮದ್ ಸಂಘಟನೆಯ ಆಡಿಯೋದಲ್ಲಿ ರಾಮಮಂದಿರ-ಬಾಬರಿ ಮಸೀದಿ ವಿವಾದ ಇದ್ದಾಗ ನಮ್ಮವರನ್ನ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆದ್ದರಿಂದ ಮಂದಿರ ಸ್ಫೋಟಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅಯೋಧ್ಯೆಯ ರಾಮಮಂದಿರಕ್ಕೆ ಜೆಇಎಂ ಬೆದರಿಕೆ ಒಡ್ಡುತ್ತಿರುವುದು ಇದೇ ಮೊದಲೇನೂ ಅಲ್ಲ. 2005 ಜುಲೈ 5 ರಂದು ಆಗಿನ ವಿವಾದಿತ ರಾಮ ಜನ್ಮಭೂಮಿ-ಬಾಬರಿ ಮಸೀದಿ ಸಂಕೀರ್ಣದ ಮೇಲೆ 5 ಭಯೋತ್ಪಾದಕರು ದಾಳಿ ಮಾಡಿದ್ದರು. ಆಗ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಕದನದಲ್ಲಿ ಎಲ್ಲ ಐವರು ಉಗ್ರರನ್ನ ಹೊಡೆದುರುಳಿಸಲಾಗಿತ್ತು. ಇದೇ ಸೇಡನ್ನು ಈಗ ತೀರಿಸಿಕೊಳ್ಳಲು ಜೈಶ್-ಎ-ಮೊಹಮ್ಮದ್ ಸಂಘಟನೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. Ad