SUDDIKSHANA KANNADA NEWS/ DAVANAGERE/ DATE:30-06-2024
ದಾವಣಗೆರೆ: ಭದ್ರಾ ಮೇಲ್ದಂಡೆ ಯೋಜನೆಯಡಿ ತುಂಗಾ ಜಲಾಶಯದಿಂದ ಭದ್ರಾ ಜಲಾಶಯಕ್ಕೆ ನೀರು ಪೂರೈಕೆ ಮಾಡಲು ಒಪ್ಪಂದದಂತೆ ಪೂರೈಕೆ ಮಾಡುವ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ನೂತನ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಇಂದು ತಮ್ಮ ಗೃಹಕಚೇರಿಯಲ್ಲಿ ನೂತನ ಸಂಸದರು ಭದ್ರಾ ಮೇಲ್ದಂಡೆ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಸಮಗ್ರ ನೀರು ಸರಬರಾಜು ಪೂರೈಸುವ ಬಗ್ಗೆ ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಪ್ರಗತಿಯ ಮಾಹಿತಿ ಪಡೆದರು.
ತುಂಗಾ ಜಲಾಶಯದಿಂದ ಭದ್ರಾ ಜಲಾಶಯಕ್ಕೆ ನೀರು ಪೂರೈಸುವ ಕಾಮಗಾರಿಯನ್ನು ಆದಷ್ಟು ಶೀಘ್ರ ಮುಕ್ತಾಯಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಭದ್ರಾ ಮೇಲ್ದಂಡೆ ಯೋಜನೆ ಪ್ರಾರಂಭವಾಗುವ ಮುನ್ನ ತುಂಗಾ ಜಲಾಶಯದಿಂದ ಭದ್ರಾ ಜಲಾಶಯಕ್ಕೆ ನೀರು ಪೂರೈಸುವ ಒಪ್ಪಂದ ಮಾಡಿಕೊಂಡಿದ್ದರೂ ಇದುವರೆಗೂ ಏಕೆ ನೀರು ಪೂರೈಸುವ ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಪ್ರಶ್ನಿಸಿದರು.
ಈಗಾಗಲೇ ಭದ್ರಾ ಮೇಲ್ದಂಡೆಯಲ್ಲಿ ಕಾಲುವೆಗಳಿಗೆ ನೀರು ಪೂರೈಸಲಾಗುತ್ತಿದೆ. ಆದರೆ ತುಂಗಾ ಜಲಾಶಯದಿಂದ ನೀರು ಏಕೆ ಪಡೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅಡಿ ಸಮರ್ಪಕ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸಂಸದರು ಆದೇಶಿಸಿದರು.
ಈ ಹಿಂದೆ ಭದ್ರಾ ಜಲಾಶಯಕ್ಕೆ ತುಂಗಾ ಜಲಾಶಯದಿಂದ ನೀರು ಪೂರೈಸುವ ಕಾಮಗಾರಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು ಅನುದಾನ ಲಭಿಸದಿದ್ದಲ್ಲಿ ನಮ್ಮ ಗಮನಕ್ಕೆ ತಂದರೆ ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಜಲನಿಗಮದ ಅಧಿಕಾರಿ ವರ್ಗದವರು, ಇಂಜಿನಿಯರ್ ಗಳು ಉಪಸ್ಥಿತರಿದ್ದರು.