ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ನನಗೆ ರಾಷ್ಟ್ರೀಯ ಅಧ್ಯಕ್ಷನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಸಮಿತಿಯ ಎಲ್ಲಾ ಸದಸ್ಯರಿಗೆ ಹೃದಯಪೂರ್ವಕ ಧನ್ಯವಾದಗಳು ಎಂದು ನೂತನ ರಾಷ್ಟ್ರಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಕಳೆದ 13 ವರ್ಷಗಳಿಂದ ಮಹಾಸಭೆಯ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದ್ದು, ಇತ್ತೀಚಿನ ಒಂದು ವರ್ಷ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆಯನ್ನೂ ನಿಭಾಯಿಸಿದ್ದೇನೆ. ನನ್ನ ಪೂಜ್ಯ ತಂದೆ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಆದರ್ಶ ಮಾರ್ಗದಲ್ಲೇ ನಡೆದು, ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಪುನರುಚ್ಚರಿಸುತ್ತೇನೆ ಎಂದು ಹೇಳಿದ್ದಾರೆ.
ವೀರಶೈವ ಮತ್ತು ಲಿಂಗಾಯತ ಬೇರೆ ಬೇರೆ ಅಲ್ಲ. ಸಮಾಜದ ಎಲ್ಲಾ ಒಳಪಂಗಡಗಳನ್ನು ಒಗ್ಗೂಡಿಸುವುದೇ ನಮ್ಮ ಪ್ರಮುಖ ಗುರಿ. ಒಗ್ಗಟ್ಟಿನಲ್ಲಿ ಬಲವಿದೆ, ವಿಘಟನೆಯಲ್ಲಿ ದೌರ್ಬಲ್ಯವಿದೆ ಎಂಬ ನಂಬಿಕೆಯಿಂದ, ಎಲ್ಲರನ್ನು ಜೊತೆಯಲ್ಲಿ ತೆಗೆದುಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.
ನಮ್ಮ ಸಮಾಜದಲ್ಲಿ ಶೇ.40–50ರಷ್ಟು ಬಡವರು ಹಾಗೂ ಶೇ.30ಕ್ಕಿಂತ ಹೆಚ್ಚು ತೀವ್ರ ಹಿಂದುಳಿದವರಿದ್ದಾರೆ. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು ಎಂಬ ಧ್ಯೇಯದೊಂದಿಗೆ, ಸಮಾನ ಅವಕಾಶ ಮತ್ತು ನ್ಯಾಯಕ್ಕಾಗಿ ಮಹಾಸಭೆಯ ಮೂಲಕ ನಿರಂತರ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ 1000 ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಮುಂದಿನ ಮಾರ್ಚ್ ತಿಂಗಳೊಳಗೆ ಶಂಕುಸ್ಥಾಪನೆ; ಒಂದೂವರೆ ವರ್ಷದಲ್ಲಿ ಪೂರ್ಣಗೊಳಿಸುವ ಗುರಿ. ವೀರಶೈವ ಲಿಂಗಾಯತ ಭವನ ಇಲ್ಲದ ಜಿಲ್ಲೆಗಳಲ್ಲಿ ಭವನ ನಿರ್ಮಾಣ. ಸಮುದಾಯದ ಪ್ರತಿಭಾವಂತರಿಗೆ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ವ್ಯವಸ್ಥೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಪಂಚಾಚಾರ್ಯರು, ಜಗದ್ಗುರುಗಳು, ಮಠಾಧಿಪತಿಗಳು, ಹರ-ಚರ ಗುರು ಮೂರ್ತಿಗಳು ಮತ್ತು ವಿರಕ್ತರ ಮಾರ್ಗದರ್ಶನ ಹಾಗೂ ಆಶೀರ್ವಾದದೊಂದಿಗೆ, ಎಲ್ಲ ಜಾತಿ–ಜನಾಂಗದವರನ್ನೂ ಜೊತೆಯಲ್ಲಿ ತೆಗೆದುಕೊಂಡು ಲೋಕಕಲ್ಯಾಣ, ಜನಹಿತ ಮತ್ತು ಸಮಾಜದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವೆ ಎಂದು
ತಿಳಿಸಿದ್ದಾರೆ.
1904ರಲ್ಲಿ ಪರಮಪೂಜ್ಯ ಹಾನಗಲ್ ಕುಮಾರೇಶ್ವರ ಮಹಾಸ್ವಾಮೀಜಿ ಅವರ ದಿವ್ಯ ಸಂಕಲ್ಪದಿಂದ ಸ್ಥಾಪಿತವಾದ ಈ ಮಹಾಸಭೆಗೆ ಸಿರಸಂಗಿ ಲಿಂಗರಾಜದೇಸಾಯರು, ರಾಜಾ ಲಖಮನಗೌಡರು, ಫ.ಗು. ಹಳಕಟ್ಟಿಯವರು, ಬಂಥನಾಳ ಸಂಗನ ಬಸವ ಸ್ವಾಮಿಗಳು, ಶತಾಯುಷಿ ಡಾ. ಶಿವಕುಮಾರ ಮಹಾಸ್ವಾಮೀಜಿ, ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಮೊದಲಾದ ಮಹಾನ್ ನಾಯಕರು ಸೇವೆ ಸಲ್ಲಿಸಿದ್ದಾರೆ. ಆ ಪರಂಪರೆಯ ಈ ಸ್ಥಾನದಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದಿದ್ದಾರೆ.





Leave a comment