ದಾವಣಗೆರೆ: ಮುಂಬರುವ ರಾಜ್ಯ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದ್ದು, ವಿಶೇಷವಾಗಿ ನೀರಾವರಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ಅಭಿವೃದ್ಧಿ ಪಥದಲ್ಲಿ ದಾವಣಗೆರೆ, ಪಂಚ ಗ್ಯಾರಂಟಿ ಮೂಲಕ ಸಾಮಾಜಿಕ ನ್ಯಾಯಕ್ಕೆ ಬದ್ಧ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಪ್ರಮುಖ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಜೆಟ್‌ನಲ್ಲಿ ಅನುದಾನ ಪಡೆಯಲು ಕ್ರಮ ವಹಿಸಲಾಗುವುದು ಎಂದರು.
ಎಸ್. ಎಸ್. ಮಲ್ಲಿಕಾರ್ಜುನ್ ಘೋಷಣೆಗಳು:
- ಬೈರನಪಾದ ಯೋಜನೆಗೆ ಚಾಲನೆ
- ಕೆರೆಗಳಿಗೆ ನೀರು ತುಂಬಿಸುವ ಯೋಜನೆ
- 175 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ
- ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಒದಗಿಸಲು ಕ್ರಮ
- ದಾವಣಗೆರೆ ವಿವಿ ಪರೀಕ್ಷಾಂಗ ವಿಭಾಗದ ಬಲವರ್ಧನೆಗೆ ಕ್ರಮ
- ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್
- ಬಾಪೂಜಿ ಆಸ್ಪತ್ರೆ ಸಹಯೋಗದಲ್ಲಿ 400 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕದ ಪ್ರಸ್ತಾವನೆ
ಕೆರೆಗಳಿಗೆ ನೀರು ತುಂಬಿಸ್ತೇವೆ:
ಹರಿಹರ ತಾಲ್ಲೂಕಿನ ಬೈರನಪಾದ ಯೋಜನೆಗೆ ಚಾಲನೆ ನೀಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಇದಕ್ಕೆ ಅನುಮೋದನೆ ಪಡೆದು ಅನುಷ್ಠಾನಕ್ಕೆ ತರಲಾಗುವುದು. ಜಿಲ್ಲೆಯ ಕೆರೆಗಳನ್ನು ತುಂಬಿಸುವ ಯೋಜನೆ ಅಡಿ, ಒಡೆದು ಹೋಗಿದ್ದ ಪೈಪ್‌ಲೈನ್‌ಗಳ ಬದಲಿಗೆ ಹೊಸದಾಗಿ ಕ್ಯಾಸ್ಟ್ ಐರನ್ ಪೈಪ್‌ಗಳನ್ನು ಅಳವಡಿಸಲು ಟೆಂಡರ್ ಕರೆಯಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ನೀರು ತುಂಬಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
200 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ:
ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಹಳೆಯ ಕಟ್ಟಡಗಳ ಬದಲಿಗೆ 175 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳ ಸುಸಜ್ಜಿತ ಹೊಸ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ. ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಡಯಾಲಿಸಿಸ್ ಘಟಕಗಳ ಸಬಲೀಕರಣ:
ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿರುವ ಡಯಾಲಿಸಿಸ್ ಯಂತ್ರಗಳು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿದ್ದು, ತಂತ್ರಜ್ಞರ ನೇಮಕ ಹಾಗೂ ವಿದ್ಯುತ್ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ದಾವಣಗೆರೆ ವಿವಿಗೆ 33 ಕೋಟಿ ರೂ.:
ದಾವಣಗೆರೆ ವಿಶ್ವವಿದ್ಯಾಲಯದ ಅಭಿವೃದ್ಧಿಗಾಗಿ ಈಗಾಗಲೇ 33 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಪರೀಕ್ಷಾಂಗ ವಿಭಾಗದ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಹರಿಹರ ತಾಲ್ಲೂಕಿನ ಕಾರ್ಗಿಲ್ ಮತ್ತು ಸಿದ್ದಿ ಸಿರಿ ಮೆಕ್ಕೆಜೋಳ ಸಂಸ್ಕರಣಾ ಘಟಕಗಳ ಪುನಶ್ಚೇತನದ ಬಗ್ಗೆ ಮಾಹಿತಿ ಪಡೆದಿದ್ದು, ರೈತರಿಗೆ ಅನುಕೂಲವಾಗುವಂತೆ ಕ್ರಮ ವಹಿಸಲಾಗುವುದು. ಅಲ್ಲದೆ, ಹಣ್ಣುಗಳ ಸಂರಕ್ಷಣೆಗಾಗಿ ರೈಪಿಂಗ್ ಚೇಂಬರ್ ಮತ್ತು ಕೋಲ್ಡ್ ಸ್ಟೋರೇಜ್ ಸೌಲಭ್ಯಗಳ ಸದ್ಬಳಕೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರ ಅನುಕೂಲಕ್ಕಾಗಿ ಬಾಪೂಜಿ ಆಸ್ಪತ್ರೆ ಸಹಯೋಗದಲ್ಲಿ 400 ಹಾಸಿಗೆಗಳ ತುರ್ತು ಚಿಕಿತ್ಸಾ ಘಟಕ ಪ್ರಾರಂಭಿಸುವ ಪ್ರಸ್ತಾವನೆ ಇದೆ ಎಂದು ಪತ್ರಕರ್ತರ ಪ್ರಶ್ನೆಗೆ ಸಚಿವರು ಮಾಹಿತಿ ನೀಡಿದರು.
ಕೇಂದ್ರ ಬಜೆಟ್ ಮೇಲೆ ಅಪಾರ ನಿರೀಕ್ಷೆ:
ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ ಕೇಂದ್ರವು ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದು ಜಿಎಸ್ ಟಿ ಹೆಚ್ಚಿನ ಆದಾಯ ನೀಡುವ ಸ್ಥಾನದಲ್ಲಿ ರಾಜ್ಯ 2 ನೇರ ಸ್ಥಾನದಲ್ಲಿದೆ. ಕೇಂದ್ರದಿಂದ ರಾಜ್ಯಕ್ಕೆ ಹಲವು ಯೋಜನೆಗಳನ್ನು ನೀಡಬಹುದೆಂದು ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಏಮ್ಸ್, ಐಐಟಿ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದರು.
ಈ ವೇಳೆ ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್.ಮಂಜಪ್ಪ, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ ಹಾಗೂ ಇನ್ನಿತರೆ ಮುಖಂಡರು ಉಪಸ್ಥಿತರಿದ್ದರು.





Leave a comment