SUDDIKSHANA KANNADA NEWS/ DAVANAGERE/ DATE:15-08-2023
ದಾವಣಗೆರೆ (Davanagere): ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಜನರಿಗೆ ಕೈಗೆಟುಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಯೋಜನೆ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಘೋಷಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆಡಳಿತದಿಂದ ಏರ್ಪಡಿಸಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು,
ನೂತನ ಸರ್ಕಾರವು ರಾಜ್ಯದ ಜನರ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ 5 ಗ್ಯಾರಂಟಿಗಳನ್ನು ರೂಪಿಸಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ:
Davanagere: ಎಸ್ಪಿ ಡಾ. ಕೆ. ಅರುಣ್ ವರ್ಗಾವಣೆಗೆ ಕಾಂಗ್ರೆಸ್ ಶಾಸಕರು ಒತ್ತಡ ಹೇರಿಲ್ಲ: ಎಸ್. ಎಸ್. ಮಲ್ಲಿಕಾರ್ಜುನ್ ಸ್ಪಷ್ಟನೆ
1942 ರಲ್ಲಿ “ಬ್ರಿಟಿಷರ ಭಾರತ ಬಿಟ್ಟು ತೊಲಗಿ” ಚಳುವಳಿಯಲ್ಲಿ ದಾವಣಗೆರೆಯಲ್ಲಿ ನಡೆದ ಹೋರಾಟ ಅತ್ಯಂತ ಪ್ರಮುಖವಾದದು. ದಾವಣಗೆರೆ ನಗರದಲ್ಲಿನ ಹಳ್ಳೂರು ನಾಗಪ್ಪ, ಅಕ್ಕಸಾಲೆ ವಿರೂಪಾಕ್ಷಪ್ಪ, ಬಿದಿರಕುಂದಿ, ನಿಂಗಪ್ಪ, ಹಮಾಲಿ ತಿಮ್ಮಣ್ಣ, ಹದಡಿ ನಿಂಗಪ್ಪ, ಮಾಗಾನಹಳ್ಳಿ ಹನುಮಂತಪ್ಪರು ಅಂದು ಬ್ರಿಟಿಷರ ಗುಂಡಿಗೆ ಪ್ರಾಣಾರ್ಪಣೆ ಮಾಡಿ ಹುತಾತ್ಮರಾಗಿದ್ದನ್ನು ನಾವಿಂದು ನೆನಪಿಸಿಕೊಳ್ಳುತ್ತ ಅವರಿಗೂ ಸಹ ನಮನಗಳನ್ನು ಸಲ್ಲಿಸೋಣ ಎಂದರು.
ಶಕ್ತಿ ಯೋಜನೆಯಡಿ ದಾವಣಗೆರೆ ವಿಭಾಗದಲ್ಲಿ ಜೂನ್, ಜುಲೈನಲ್ಲಿ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ಒಟ್ಟು 53,20,749 ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸುವ ಮೂಲಕ ರೂ. 13,16,20,254 ಗಳ ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ಇದೇ ಆಗಸ್ಟ್ ತಿಂಗಳಲ್ಲಿ 4566 ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. 14 ಕೆ.ಜಿ ರಾಗಿ ಹಾಗೂ 21 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಆದ್ಯತಾ ಕುಟುಂಬದ 1121525 ಸದಸ್ಯರಿಗೆ 5 ಕೆ.ಜಿ ಆಹಾರಧಾನ್ಯವನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಪ್ರತಿ ಒಬ್ಬ ಸದಸ್ಯರಿಗೆ 2 ಕೆ.ಜಿ ರಾಗಿ ಹಾಗೂ 3 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಎಂದರು.
ಗೃಹಜ್ಯೋತಿ ಯೋಜನೆ”ಯಡಿ ದಾವಣಗೆರೆ ಜಿಲ್ಲೆಯಲ್ಲಿ ಜುಲೈ 27 ರವರೆಗೆ ಗೃಹ ಜ್ಯೋತಿ ಯೋಜನೆಗೆ 3,48,260 ಸಂಖ್ಯೆಯ ಗ್ರಾಹಕರು ನೊಂದಣಿ ಮಾಡಿಕೊಂಡಿದ್ದು, ಆಗಸ್ಟ್-1 ರಿಂದ ಈ ಯೋಜನೆಯ ಸೌಲಭ್ಯವನ್ನು ಪಡೆಯುತ್ತಿದ್ದಾರೆ ಎಂದ
ಅವರು, ಗೃಹಲಕ್ಷ್ಮಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಸುಮಾರು 3.50 ಲಕ್ಷ ಫಲಾನುಭವಿಗಳು ಯೋಜನೆಯ ಲಾಭವನ್ನು ಪಡೆದುಕೊಳ್ಳಲಿದ್ದಾರೆ ಎಂದು ವಿವರಿಸಿದರು.
ದಾವಣಗೆರೆ ನಗರಕ್ಕೆ ನಿರಂತರ ನೀರು ಸರಬರಾಜು ಮಾಡಲು ಜಲಸಿರಿ ಯೋಜನೆಯಡಿ ಕಾಮಗಾರಿ ಪ್ರಗತಿಯಲ್ಲಿದ್ದು, ಹಂತ ಹಂತವಾಗಿ ಎಲ್ಲಾ ಬಡಾವಣೆಗಳಲ್ಲಿ ನೀರು ಪೂರೈಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದಾವಣಗೆರೆಯನ್ನು ಇನ್ನು ಹೆಚ್ಚು ಸುಂದರ, ಪರಿಸರಸ್ನೇಹಿ, ಜನಸ್ನೇಹಿ ನಗರವನ್ನಾಗಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ನರೇಗಾ ಯೋಜನೆಯಡಿ ಈ ವರ್ಷ 35 ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಿದ್ದು, ಜುಲೈ ಅಂತ್ಯಕ್ಕೆ 15.44 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿ ರೂ. 48.21 ಕೋಟಿ ಕೂಲಿ ಹಣ ಪಾವತಿಸಿದೆ. ಅಮೃತ್ ಸರೋವರ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 150 ಕೆರೆಗಳ ಅಭಿವೃದ್ಧಿ ಕಾರ್ಯವನ್ನು ಕೈಗೊಂಡಿದ್ದು, ಇದುವರೆಗೂ 125 ಕೆರೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಅಮೃತ ಗ್ರಾಮ ಪಂಚಾಯಿತಿ ಯೋಜನೆಯಡಿ ಮೊದಲ ಹಂತದಲ್ಲಿ 27 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿದ್ದು, ಈ ಪಂಚಾಯಿತಿಗಳಿಗೆ ಪ್ರೋತ್ಸಾಹಧನವಾಗಿ ಪ್ರತಿ ಪಂಚಾಯತಿಗೆ ರೂ.25 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗಳಿಗೆ ನಳ ಸಂಪರ್ಕ ಕಲ್ಪಿಸಲು ನಾಲ್ಕು ಹಂತದಲ್ಲಿ 161639 ಮನೆಗಳಿಗೆ ನಲ್ಲಿ ನೀರು ಕಲ್ಪಿಸಲು 882 ಕಾಮಗಾರಿಗಳನ್ನು ರೂಪಿಸಿದೆ. ಇದರಲ್ಲಿ 495 ಕಾಮಗಾರಿಗಳು ಪೂರ್ಣವಾಗಿದ್ದು, 387 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದರು.
ತೋಟಗಾರಿಕೆಯಲ್ಲಿ ಮುಂಚೂಣಿ ಜಿಲ್ಲೆಯಾಗಿದ್ದು, ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ತೋಟಗಾರಿಕೆಯನ್ನು ಪ್ರೋತ್ಸಾಹಿಸಲು ಇಲಾಖೆಯ ಮೂಲಕ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಇತರೆ ಯೋಜನೆಗಳ ಮೂಲಕ ತೋಟಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಸಹಾಯಧನ
ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ವಿನಾಯಕ್ ಜಿ.ಹೆಚ್. ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್, ಪೂರ್ವ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ. ಕೆ. ತ್ಯಾಗರಾಜನ್, ಜಿಲ್ಲಾ ರಕ್ಷಣಾಧಿಕಾರಿ ಡಾ. ಕೆ. ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.