Home ದಾವಣಗೆರೆ ದಾವಣಗೆರೆಯಲ್ಲಿ ಬೆಲೆ ಏರಿಕೆ ವಿರುದ್ಧ “ಕೈ” ಪಡೆ ಪ್ರತಿಭಟನೆ: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಇಳಿಕೆಗೆ ಆಗ್ರಹ!
ದಾವಣಗೆರೆನವದೆಹಲಿಬೆಂಗಳೂರು

ದಾವಣಗೆರೆಯಲ್ಲಿ ಬೆಲೆ ಏರಿಕೆ ವಿರುದ್ಧ “ಕೈ” ಪಡೆ ಪ್ರತಿಭಟನೆ: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಇಳಿಕೆಗೆ ಆಗ್ರಹ!

Share
ದಾವಣಗೆರೆ
Share

ದಾವಣಗೆರೆ: ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿರಂತರವಾಗಿ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಜಯದೇವ ವೃತ್ತದಲ್ಲಿ ಜಮಾವಣೆಗೊಂಡ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ಕಳೆದ ಒಂದು ತಿಂಗಳಿನಿಂದ ಕೇಂದ್ರ ಸರ್ಕಾರವು ಸಾರ್ವಜನಿಕರ ಹಿತಾಸಕ್ತಿಯನ್ನು ಗಾಳಿಗೆ ತೂರಿ, 4 ರಿಂದ 5 ಬಾರಿ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಸರ್ಕಾರದ ಒಡೆತನದ ತೈಲ ಮಾರಾಟ ಕಂಪನಿಗಳು ಕೇವಲ 11 ದಿನಗಳ ಅಂತರದಲ್ಲಿ ಬರೋಬ್ಬರಿ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದು, ಲೀಟರ್‌ಗೆ ಸರಿಸುಮಾರು ₹10 ರಷ್ಟು ಬೆಲೆ ಹೆಚ್ಚಳವಾಗಿದೆ. ಇದರಿಂದಾಗಿ ದೇಶದ ಹಾಗೂ ಜಿಲ್ಲೆಯ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಸಂಪೂರ್ಣವಾಗಿ ಕಂಗಾಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯ ವ್ಯತ್ಯಾಸ:

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇಕಡಾ 5 ರಷ್ಟು ಏರಿಕೆಯಾದ ತಕ್ಷಣ “ತೈಲ ಕಂಪನಿಗಳು ನಷ್ಟದಲ್ಲಿವೆ” ಎಂಬ ನೆಪವೊಡ್ಡಿ ರಾತ್ರೋರಾತ್ರಿ ಬೆಲೆ ಏರಿಸುವ ಕೇಂದ್ರ ಸರ್ಕಾರ, ಅದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಶೇಕಡಾ 20 ರಷ್ಟು ಕುಸಿದಾಗಲೂ ಅದರ ಲಾಭವನ್ನು ಜನರಿಗೆ ನೀಡದೆ ವಂಚಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಬೆಲೆ ಇಳಿಕೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ:

ಈಗಾಗಲೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ ₹1,000 ಗಳಷ್ಟು ಭಾರಿ ಹೆಚ್ಚಳವಾಗಿದ್ದು, ಇದರ ನೇರ ಪರಿಣಾಮ ಸಣ್ಣ ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಮೇಲೆ ಬೀಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡೀಸೆಲ್ ಬೆಲೆ ಏರಿಕೆಯಾಗಿರುವುದರಿಂದ ಸರಕು ಸಾಗಣೆ ವೆಚ್ಚ ಗಗನಕ್ಕೇರಿದೆ. ಇದರ ನೇರ ಪರಿಣಾಮವಾಗಿ ಸಾರ್ವಜನಿಕರು ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಮತ್ತು ತರಕಾರಿಗಳ ಬೆಲೆಗಳು ವಿಪರೀತವಾಗಿ ಹೆಚ್ಚಳವಾಗಿದ್ದು, ಬಡ ಹಾಗೂ ಮಧ್ಯಮ
ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಒಟ್ಟಾರೆ ಆರ್ಥಿಕ ಅಭಿವೃದ್ಧಿ ಕುಂಠಿತಗೊಂಡಿದೆ. ಕೇಂದ್ರದ ವಿದೇಶಾಂಗ ನೀತಿಗಳಿಂದ ದೇಶಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ ಮತ್ತು ಜಾರಿಗೆ ತರುತ್ತಿರುವ ಕೃಷಿ ನೀತಿಗಳು ದೇಶದ ಬೆನ್ನೆಲುಬಾದ ರೈತರಿಗೆ ಮಾರಕವಾಗಿ ಪರಿಣಮಿಸಿವೆ ಎಂದು ದೂರಿದರು.

ಕೇಂದ್ರ ಸರ್ಕಾರವು ದೇಶದ ಜ್ವಲಂತ ಆರ್ಥಿಕ ಸಮಸ್ಯೆಗಳನ್ನು ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ಕ್ಷುಲ್ಲಕ ವಿಚಾರಗಳನ್ನು ಮುಂಚೂಣಿಗೆ ತಂದು ಜನಸಾಮಾನ್ಯರ ಗಮನವನ್ನು ದಿಕ್ಕು ತಪ್ಪಿಸುತ್ತಿದೆ ಎಂದು
ಹೇಳಿದರು.

ದೇಶದ ಆರ್ಥಿಕ ಪರಿಸ್ಥಿತಿಯನ್ನು ಹದಗೆಡಿಸಿ, ಜನಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಈ ಜನವಿರೋಧಿ ಕೇಂದ್ರ ಸರ್ಕಾರವು ತಕ್ಷಣವೇ ಜಾರಿಗೆ ಬರುವಂತೆ ಹೆಚ್ಚಿಸಲಾದ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ದರಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯು ಸಾರ್ವಜನಿಕರನ್ನು ಒಗ್ಗೂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮತ್ತಷ್ಟು ಉಗ್ರವಾದ ಹೋರಾಟಗಳನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಉಪವಿಭಾಗಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್. ಬಿ. ಮಂಜಪ್ಪ ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ದಕ್ಷಿಣ ಬ್ಲಾಕ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ಎ. ನಾಗರಾಜ್, ಸಾಗರ್ ಎಲ್. ಎಂ. ಹೆಚ್., ಅನಿತಾ, ದಾಕ್ಷಾಯಣಮ್ಮ ಮತ್ತಿತರರು ಪಾಲ್ಗೊಂಡಿದ್ದರು.

Share

Leave a comment

Leave a Reply

Your email address will not be published. Required fields are marked *

Recent Comments

No comments to show.
Related Articles