ದಾವಣಗೆರೆ: ಜೂ.21 ರಂದು ನಡೆಯುವ ನೀಟ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಯ ಯಶಸ್ವಿಗೆ ಅಧಿಕಾರಿ ಮತ್ತು ಸಿಬ್ಬಂದಿಗಳು ಶ್ರಮಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.
ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನೀಟ್ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 7416 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಜೂ.21 ರಂದು 13 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಗಾಳಿ ಬೆಳಕು, ಶೌಚಾಲಯ ವ್ಯವಸ್ಥೆ, ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಬೇಕು. ಪ್ರಶ್ನೆ ಪತ್ರಿಕೆಗಳ ಸುರಕ್ಷತೆ ಸಾಗಣೆ, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಪೊಲೀಸ್ ಬಂದೋಬಸ್ತ್ ಹಾಗೂ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾರ್ಥಿಗಳು ಯಾವುದೇ ವಿಧವಾದ ಕೈ ಗಡಿಯಾರವನ್ನು ಕಡ್ಡಾಯವಾಗಿ ಧರಿಸುವಂತಿಲ್ಲ. ಕೊಠಡಿಗಳಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿರುತ್ತದೆ. ಪರೀಕ್ಷೆ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ವಿಶೇಷಚೇತನ ವಿದ್ಯಾರ್ಥಿಗಳಿಗೆ ಯುಬಿಡಿಟಿ ಕಾಲೇಜು ಮತ್ತು ಕೇಂದ್ರೀಯ ವಿದ್ಯಾಲಯದಲ್ಲಿ ಪರೀಕ್ಷೆ ಬರೆಯುವಂತೆ ಅನುವು ಮಾಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳ ತಪಾಸಣಾ ಕಾರ್ಯಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಬಿಗಿ ಪೊಲೀಸ್ ಬಂದೋಬ್ತಸ್ ವ್ಯವಸ್ಥೆ ಕೈಗೊಳ್ಳಬೇಕು.
ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ:
ನಿಗದಿಪಡಿಸಿದ ವಸ್ತ್ರ ಸಂಹಿತೆ(ಡ್ರೆಸ್ ಕೋಡ್)ನ್ನು ಪ್ರತಿಯೊಬ್ಬ ಅಭ್ಯರ್ಥಿಯು ಕಡ್ಡಾಯವಾಗಿ ಪಾಲಿಸಬೇಕು. ಉದ್ದ ತೋಳಿನ ಹಾಗೂ ತಲೆ ಮುಚ್ಚುವ ಉಡುಪು ಧರಿಸಿ ಬರುವಂತಿಲ್ಲ. ಬೆಲ್ಟ್, ಟೋಪಿ ಹಾಗೂ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳಸೂತ್ರ ಹೊರತುಪಡಿಸಿ). ಶೂ ಹಾಕಿಕೊಂಡು ಬರುವಂತಿಲ್ಲ, ಸಾದಾ ಚಪ್ಪಲಿಗಳನ್ನು ಧರಿಸಿರಬೇಕು ಎಂದು ತಿಳಿಸಿದರು. ಪರೀಕ್ಷಾರ್ಥಿಗಳು ಹಾಗೂ ಕೊಠಡಿಯ ಮೇಲ್ವಿಚಾರಕರಾಗಲಿ ಪರೀಕ್ಷಾ ಕೇಂದ್ರದೊಳಗೆ ಅತ್ಯಾಧುನಿಕ ಎಲೆಕ್ಟ್ರಾನಿಕ್ ಉಪಕರಣಗಳಾದ ಮೊಬೈಲ್, ಬ್ಲೂಟೂತ್, ಇಯರ್ ಫೋನ್ಗಳು, ಮೈಕ್ರೋಫೋನ್, ಪೇಜರ್, ವೈರಲೆಸ್ ಸೆಟ್, ಲಾಗ್ ಟೇಬಲ್, ಕ್ಯಾಲಕ್ಯುಲೇಟರ್ ಹಾಗೂ ಗಡಿಯಾರಗಳನ್ನು ನಿಷೇಧಿಸಿದೆ. ಈ ಕುರಿತಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಸೂಚಿಸಿದರು.
ನೀಟ್ ಪರೀಕ್ಷೆಯು ಜೂನ್ 21ರಂದು ಮಧ್ಯಾಹ್ನ 2 ರಿಂದ ಸಂಜೆ 6.15ರ ವರೆಗೆ ನಡೆಯಲಿದ್ದು, ಮಳೆಗಾಲ ಇರುವುದರಿಂದ ಪರೀಕ್ಷಾ ಕೇಂದ್ರದ ಕಟ್ಟಡದಲ್ಲಿ ನೀರು ಸೋರಿಕೆಯಾಗದಂತೆ ಮುಂಚಿತವಾಗಿ ತಪಾಸಣೆ ಮಾಡಲು ತಿಳಿಸಿದರು. ಜೆರಾಕ್ಸ್ ಅಂಗಡಿನ್ನು ಬಂದ್ ಮಾಡುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ.ಹೆಚ್.ಟಿ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.





Leave a comment