SUDDIKSHANA KANNADA NEWS/ DAVANAGERE/ DATE:24-12-2024
ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ ಎಂದು ಮಹಾನಗರ ಪಾಲಿಕೆಯ ನಗರ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸವಿತಾ ಹುಲ್ಲುಮನೆ ಗಣೇಶ್ ಅವರು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಸ್.ಎಸ್.ಮಲ್ಲಿಕಾರ್ಜುನ್ ಕಳೆದ ಮೂರು ದಶಕಗಳಿಂದ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಇಷ್ಟೊಂದು ಬಲಿಷ್ಠವಾಗಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರೇ ಕಾರಣ. ಮಲ್ಲಿಕಾರ್ಜುನ್ ಅವರು ನಾಲ್ಕು ಬಾರಿ ಶಾಸಕರಾಗಿ ಮೂರು ಬಾರಿ ಸಚಿವರಾಗಿ ನಗರ ಮತ್ತು ಜಿಲ್ಲೆಯಾದ್ಯಂತ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ತಿಳಿಸಿದ್ದಾರೆ.
ಇಂಥ ಅಭಿವೃದ್ಧಿ ಹರಿಕಾರ, ಜನಪರ ಕಾಳಜಿಯುಳ್ಳ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಬಗ್ಗೆ ಶಿವಗಂಗಾ ಬಸವರಾಜ್ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದ್ದಾರೆ.
ದೊಡ್ಡವರ ಬಗ್ಗೆ ಅಗೌರವದಿಂದ ಮಾತನಾಡುವುದು ಸರಿಯಲ್ಲ, ಗೌರವದಿಂದ ನಡೆದುಕೊಳ್ಳುವುದನ್ನು ಕಲಿಯಿರಿ. ಮಲ್ಲಿಕಾರ್ಜುನ್ ಅವರು ಪಕ್ಷಕ್ಕೆ ಎಷ್ಟು ಸೇವೆ ಸಲ್ಲಿಸಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅವರ ಬಗ್ಗೆ ಆ ರೀತಿ ಮಾತನಾಡುವುದು ಸರಿಯಲ್ಲ ಎಂದು ಸವಿತಾ ಹುಲ್ಲುಮನೆ ಗಣೇಶ್ ಅವರು ಕಿಡಿಕಾರಿದ್ದಾರೆ.