SUDDIKSHANA KANNADA NEWS/ DAVANAGERE/ DATE:25-12-2024
ದಾವಣಗೆರೆ: ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್ ಸರ್ಕಾರ ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.