Home ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಶಿಕ್ಷಣ ಸಚಿವರ ರಾಜೀನಾಮೆಗೆ ಮಹಬೂಬ್ ಬಾಷಾ ಆಗ್ರಹ
Homeದಾವಣಗೆರೆಬೆಂಗಳೂರು

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಶಿಕ್ಷಣ ಸಚಿವರ ರಾಜೀನಾಮೆಗೆ ಮಹಬೂಬ್ ಬಾಷಾ ಆಗ್ರಹ

Share
ವಿದ್ಯಾರ್ಥಿ
Share

ದಾವಣಗೆರೆ: ನೀಟ್ (NEET) ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ:

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕೇಂದ್ರ ಸರ್ಕಾರವು ದೇಶದ ಯುವಜನರು ಮತ್ತು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ನಂತರ ದೇಶಾದ್ಯಂತ 23ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ತೀವ್ರ ಕಳವಳಕಾರಿ ವಿಷಯ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ವಿದ್ಯಾರ್ಥಿಗಳ ಜೀವ ಹಿಂಡುವ ಇಂತಹ ಭ್ರಷ್ಟ ಆಡಳಿತ ವ್ಯವಸ್ಥೆ ತಕ್ಷಣವೇ ಕೊನೆಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ದ್ವಿತೀಯ ಸ್ವಾತಂತ್ರ್ಯ ಸಂಗ್ರಾಮದ ಮಾದರಿ ಹೋರಾಟ:

ಕಾರ್ಪೊರೇಟ್ ಶಿಕ್ಷಣ ನೀತಿಗಳೇ ನೀಟ್ ಹಗರಣ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮುಖ್ಯ ಕಾರಣ ಎಂದು ಆರೋಪಿಸಿದ ಮಹಬೂಬ್ ಬಾಷಾ, “ಪರೀಕ್ಷಾ ಅಕ್ರಮದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಈ ಹೋರಾಟವು ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ವ್ಯಾಪಿಸುತ್ತಿದೆ. ಆಳುವ ಸರ್ಕಾರವು ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು. ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನತೆ ಮತ್ತು ವಿದ್ಯಾರ್ಥಿಗಳು ಜಾಗೃತರಾಗಬೇಕು” ಎಂದು ಕರೆ ನೀಡಿದ್ದಾರೆ.

ಪರೀಕ್ಷಾ ವ್ಯವಸ್ಥೆಯಲ್ಲಿರುವ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಹಾಗೂ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *