SUDDIKSHANA KANNADA NEWS/ DAVANAGERE/ DATE:31-12-2024
ದಾವಣಗೆರೆ: ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸುವಂತೆ ಸರಕಾರವನ್ನು ಒತ್ತಾಯಿಸಲು ಜನವರಿ 2ರಂದು ಬೆಳಿಗ್ಗೆ 11 ಘಂಟೆಗೆ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಸರ್ವ ಕನ್ನಡಿಗರ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದ್ದಾರೆ.
ಜನವರಿ 5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯರು ದಾವಣಗೆರೆಗೆ ಭೇಟಿ ನೀಡಲಿರುವುದರಿಂದ ಅಂದು ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹಾಗೂ ಜಿಲ್ಲೆಯ ಎಲ್ಲ ಶಾಸಕರ ನೇತೃತ್ವದಲ್ಲಿ ನಿಯೋಗದ ಮೂಲಕ ಭೇಟಿ ಮಾಡಿ ಮನವಿ ಸಲ್ಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ.
ಈ ಪೂರ್ವಭಾವಿ ಸಭೆಗೆ ಜಿಲ್ಲೆಯ ವಿದ್ವಾಂಸರು, ಸಾಹಿತಿಗಳು, ಕವಿಗಳು, ಕಲಾವಿದರು, ಪತ್ರಕರ್ತರು, ಜನಪ್ರತಿನಿಧಿಗಳು, ರಾಜಕೀಯ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಹೋರಾಟಗಾರರು, ಸರಕಾರಿ-ಸರ್ಕಾರೇತರ ನೌಕರ ಸಂಘಟನೆಗಳ ನಾಯಕರು, ಕಾರ್ಮಿಕ ಸಂಘಟನೆಗಳ ಮುಖಂಡರು, ರೈತ ಮುಖಂಡರು, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ಸೇರಿದಂತೆ ಕನ್ನಡಿಗರು ಸಭೆಗೆ ಆಗಮಿಸಿ ತಮ್ಮ ಸಲಹೆ, ಸೂಚನೆ, ಮಾರ್ಗದರ್ಶನವನ್ನು ನೀಡುವುದರ ಮೂಲಕ ವಿಶ್ವ ಕನ್ನಡ ಸಮ್ಮೇಳನವನ್ನು ದಾವಣಗೆರೆಯಲ್ಲಿಯೇ ಅತೀ ಶೀಘ್ರದಲ್ಲಿ ನಡೆಸಬೇಕೆಂದು ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿಸಹಕಾರ ನೀಡಬೇಕೆಂದು ಬಿ.ವಾಮದೇವಪ್ಪ ಅವರು ವಿನಂತಿಸಿಕೊಂಡಿದ್ದಾರೆ.