SUDDIKSHANA KANNADA NEWS/ DAVANAGERE/ DATE:07-01-2025
ಬೆಂಗಳೂರು: ರಾಜ್ಯದಲ್ಲಿ ತಾಯಂದಿರ ಮರಣ ಅನುಪಾತ ದೇಶಕ್ಕೆ ಹೋಲಿಸಿದರೆ ಕಡಿಮೆಯಿದೆ. 2018-20ರ ಅವಧಿಯಲ್ಲಿ ರಾಜ್ಯದಲ್ಲಿ ಒಂದು ಲಕ್ಷಕ್ಕೆ 69 ಮರಣ ಸಂಭವಿಸುತ್ತಿದ್ದು, ದೇಶದ ಅನುಪಾತ 97 ಇದೆ. 2022-24ರ ಅವಧಿಯಲ್ಲಿ ರಾಜ್ಯದಲ್ಲಿ ಇದರ ಪ್ರಮಾಣ 55 ಕ್ಕೆ ಇಳಿದಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ಸಭೆಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ. ತಡೆಗಟ್ಟಬಹುದಾದ
ತಾಯಂದಿರ ಮರಣವನ್ನು ಶೂನ್ಯಕ್ಕೆ ಇಳಿಸಲು ವ್ಯಾಪಕ ಅಭಿಯಾನ ಆರಂಭಿಸಬೇಕು. ತಾಯಂದಿರ ಮರಣ ತಡೆಗಟ್ಟಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.
ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ತಜ್ಞರು ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಇದಕ್ಕಾಗಿ ಕಡಿಮೆ ಹೆರಿಗೆ ಪ್ರಮಾಣವಿರುವ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಪುನರ್ ನಿಯೋಜನೆ ಮಾಡಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯಾಧಿಕಾರಿಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಔಷಧಿ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.