SUDDIKSHANA KANNADA NEWS/ DAVANAGERE/ DATE:24-01-2025
ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನ ಕಾರ್ಯಕ್ರಮದಲ್ಲಿ ಗೋವಿಂದು ಅವರನ್ನು ಸನ್ಮಾನಿಸಿ, ಅಭಿನಂದಿಸಿ ಮಾತನಾಡಿದರು.
ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.
ಕನ್ನಡ ಕೆಲಸಕ್ಕೆ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುವುದು ಎಂದರು.
ಹಿರಿಯ ಸಾಹಿತಿ ಹಂಪನಾ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೋ.ರು.ಚನ್ನಬಸಪ್ಪ, ನಾಡೋಜ ಬರಗೂರು ರಾಮಚಂದ್ರಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಹಿರಿಯ ಪತ್ರಕರ್ತರಾದ ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.