ದಾವಣಗೆರೆ/ಭುವನೇಶ್ವರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಬಂಧಿತ ಸಂಸದೀಯ ಸಮಿತಿಯ ಅಧ್ಯಯನ ಪ್ರವಾಸದ ಅಂಗವಾಗಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಮಂಗಳವಾರ ಒಡಿಶಾದ ಭುವನೇಶ್ವರದಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಗೆ ಭೇಟಿ ನೀಡಿ, ಆಸ್ಪತ್ರೆಯ ಆರೋಗ್ಯ ಸೇವೆಗಳು, ಮೂಲಸೌಕರ್ಯ ಹಾಗೂ ರೋಗಿಗಳ ಆರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದರು.
ಆಸ್ಪತ್ರೆಯ ಮೆಡಿಕಲ್ ಸೂಪರಿಂಟೆಂಡೆಂಟ್ ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ದೊರೆಯುವಂತೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ಮೂಲಸೌಕರ್ಯ ವೃದ್ಧಿ ಹಾಗೂ ರೋಗಿಗಳ ಆರೈಕೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವ ಕುರಿತು ಮಾಹಿತಿ ಪಡೆದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಇದೇ ಸಂದರ್ಭದಲ್ಲಿ ಭುವನೇಶ್ವರ ಏಮ್ಸ್‌ನಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಬಂಧಿತ ಸಂಸದೀಯ ಸಮಿತಿ ಸಭೆಯಲ್ಲಿ ಭಾಗವಹಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಸಾರ್ವಜನಿಕ ವಲಯದ ಉದ್ಯಮಗಳ (PSU) ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಬಳಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಸಿಎಸ್ ಆರ್ ನಿಧಿಯನ್ನು ಪ್ರತ್ಯೇಕ ಯೋಜನೆಗಳಿಗೆ ಸೀಮಿತಗೊಳಿಸುವ ಬದಲು, ಆಯುಷ್ಮಾನ್ ಭಾರತ್ ಅಡಿಯಲ್ಲಿ ಕಾರ್ಯನಿರ್ವಹಿಸುವ ಆಯುಷ್ಮಾನ್ ಆರೋಗ್ಯ ಮಂದಿರಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳ ನೈಜ ಅಗತ್ಯಗಳಿಗೆ ಅನುಗುಣವಾಗಿ ಬಳಸಬೇಕು ಎಂದು ಅವರು ಸಲಹೆ ನೀಡಿದರು. ವಿಶೇಷವಾಗಿ ಗ್ರಾಮೀಣ ಹಾಗೂ ಬುಡಕಟ್ಟು ಪ್ರದೇಶಗಳ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸಲು ಮೊಬೈಲ್ ಮೆಡಿಕಲ್ ಯೂನಿಟ್‌ಗಳು ಮತ್ತು ಟೆಲಿಮೆಡಿಸಿನ್ ವ್ಯವಸ್ಥೆಯನ್ನು ಬಲಪಡಿಸಲು ಸಿಎಸ್ ಆರ್ ನಿಧಿಯನ್ನು ಬಳಸಿಕೊಳ್ಳಬಹುದಾಗಿದೆ ಎಂದರು.
ಸಿಎಸ್ ಆರ್ ಅನುದಾನವು ಕಟ್ಟಡ ನಿರ್ಮಾಣ ಅಥವಾ ವೈದ್ಯಕೀಯ ಉಪಕರಣಗಳ ಖರೀದಿಗೆ ಮಾತ್ರ ಸೀಮಿತವಾಗಬಾರದು. ಒದಗಿಸಿದ ಸೌಲಭ್ಯಗಳ ನಿರಂತರ ನಿರ್ವಹಣೆ, ತಾಂತ್ರಿಕ ಬೆಂಬಲ ಹಾಗೂ ಡಿಜಿಟಲ್ ಸಂಪರ್ಕಕ್ಕೂ ಆದ್ಯತೆ ನೀಡಬೇಕು. ಇದರಿಂದ ಆರೋಗ್ಯ ಮೂಲಸೌಕರ್ಯ ದೀರ್ಘಾವಧಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
“ಜನರ ವೈದ್ಯಕೀಯ ವೆಚ್ಚದ ಹೊರೆಯನ್ನು ತಗ್ಗಿಸುವುದರ ಜೊತೆಗೆ, ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಸ್ಥಿರವಾಗಿ ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ,” ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು





Leave a comment