ದಾವಣಗೆರೆ: ಮುಂಬರುವ ಶ್ರೀ ಗಣೇಶ ಚತುರ್ಥಿ ಆಚರಣೆಯ ಸಂದರ್ಭದಲ್ಲಿ ಮೆರವಣಿಗೆ ಹಾಗೂ ಪೆಂಡಾಲ್ಗಳಲ್ಲಿ ಡಿಜೆ (DJ) ಸೌಂಡ್ ಸಿಸ್ಟಮ್ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಮತ್ತು ಗಣೇಶೋತ್ಸವ ಸಮಿತಿ ಆಯೋಜಕರಲ್ಲಿ ಸೃಷ್ಟಿಯಾಗಿರುವ ಗೊಂದಲಕ್ಕೆ ಶೀಘ್ರದಲ್ಲೇ ತೆರೆ ಬೀಳಲಿದೆ.
ಈ ಕುರಿತು ಶೀಘ್ರವೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ (SP) ಪ್ರತ್ಯೇಕ ಹಾಗೂ ಸಮಗ್ರ ಸಭೆ ನಡೆಸಿ, ಸರ್ಕಾರಿ ಮಾರ್ಗಸೂಚಿ ಮತ್ತು ಕಾನೂನು ವ್ಯಾಪ್ತಿಯಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ಶಬ್ದ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಡಿಜೆ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ಪೊಲೀಸ್ ಇಲಾಖೆಯಿಂದ ಸೂಚನೆಗಳು ಬಂದಿರುವುದರಿಂದ ಆಯೋಜಕರು ಗೊಂದಲಕ್ಕೊಳಗಾಗಿದ್ದರು. ಸ್ಥಳೀಯ ಕಲಾ ತಂಡಗಳನ್ನು ಪ್ರೋತ್ಸಾಹಿಸುವುದು ಮತ್ತು ಹಿರಿಯ ನಾಗರಿಕರು, ಮಕ್ಕಳಿಗೆ ಶಬ್ದದಿಂದ ತೊಂದರೆಯಾಗದಂತೆ ನೋಡಿಕೊಳ್ಳುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ.
ಸಾರ್ವಜನಿಕ ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಹಬ್ಬದ ಆಚರಣೆಗೆ ಯಾವುದೇ ತೊಂದರೆಯಾಗದಂತೆ ಮಧ್ಯಮ ಮಾರ್ಗದ ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. “ಗಣೇಶೋತ್ಸವವು ನಮ್ಮ ನಾಡಿನ ಭಾವನಾತ್ಮಕ ಮತ್ತು ಸಾಂಸ್ಕೃತಿಕ ಹಬ್ಬ. ಪ್ರತಿಯೊಬ್ಬರೂ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದಿಂದ ಹಬ್ಬವನ್ನು ಆಚರಿಸಲು ಸಾರ್ವಜನಿಕರು ಮತ್ತು ಉತ್ಸವ ಸಮಿತಿಗಳು ಸಂಪೂರ್ಣ ಸಹಕಾರ ನೀಡಬೇಕು” ಎಂದು ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿನಂತಿಸಿದ್ದಾರೆ.





Leave a comment