
ನವದೆಹಲಿ: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಇಂಡಿಯನ್ ಮುಜಾಹಿದ್ದೀನ್ (IM) ಉಗ್ರ ಸಂಘಟನೆಯ ಭಯೋತ್ಪಾದಕ ಅಹಮದ್ ಬಾವಾ (ಅಲಿಯಾಸ್ ಅಬ್ಬು ಅಬುಬಕರ್ ಬರೇಲ್ವಿ) ನೀಡಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಆತನ ಗಲ್ಲಿಗೇರಿಸುವ ಶಿಕ್ಷೆಗೆ ಗುರುವಾರ ಮಧ್ಯಂತರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಎ. ಜಿ. ಮಸಿಹ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ತ್ರಿಪೀಠವು ಈ ಆದೇಶವನ್ನು ಹೊರಡಿಸಿದ್ದು, ಗುಜರಾತ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಹಾಗೂ ವಿಚಾರಣಾ ನ್ಯಾಯಾಲಯದ ಎಲ್ಲಾ ದಾಖಲೆಗಳನ್ನು ಪರಿಶೀಲನೆಗಾಗಿ ಸಲ್ಲಿಸುವಂತೆ ಸೂಚಿಸಿದೆ.
ಪ್ರಕರಣದ ಹಿನ್ನೆಲೆ ಮತ್ತು ವಿವರ:
ಸ್ಫೋಟದ ಭೀಕರತೆ:26 ಜುಲೈ 2008 ರಂದು ಅಹಮದಾಬಾದ್‌ನ ವಿವಿಧ ಭಾಗಗಳಲ್ಲಿ ಕೇವಲ 70ನಿಮಿಷಗಳ ಅಂತರದಲ್ಲಿ 21 ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಈ ದುರಂತದಲ್ಲಿ 52 ಜನರು ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಗಾಯಗೊಂಡವರನ್ನು ಕರೆದೊಯ್ಯಲಾಗಿದ್ದ ಆಸ್ಪತ್ರೆಗಳನ್ನೇ ಗುರಿಯಾಗಿಸಿಕೊಂಡು ಸ್ಫೋಟ ನಡೆಸಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಯಾಗಿತ್ತು.
ವಿಶೇಷ ನ್ಯಾಯಾಲಯ ಹಾಗೂ ಹೈಕೋರ್ಟ್ ತೀರ್ಪು: ಫೆಬ್ರವರಿ 2022 ರಲ್ಲಿ ವಿಶೇಷ ನ್ಯಾಯಾಲಯವು ಒಟ್ಟು 49 ಜನರನ್ನು ದೋಷಿ ಎಂದು ಘೋಷಿಸಿ, ೩೮ ಆರೋಪಿಗಳಿಗೆ ಗಲ್ಲು ಶಿಕ್ಷೆ ಮತ್ತು 11 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ನಂತರ ಜುಲೈನಲ್ಲಿ ಗುಜರಾತ್ ಹೈಕೋರ್ಟ್ ಕೂಡ ಈ ತೀರ್ಪನ್ನು ಎತ್ತಿಹಿಡಿದು, ಸಮಾಜದಲ್ಲಿ ಭೀತಿ ಹುಟ್ಟಿಸುವ ಉದ್ದೇಶ ಮತ್ತು ಪಿತೂರಿಯ ತೀವ್ರತೆಯನ್ನು ಎತ್ತಿಹಿಡಿದಿತ್ತು.
ಮೇಲ್ಮನವಿ ವಿಚಾರಣೆ: ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅಹಮದ್ ಬಾವಾ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಮರಣದಂಡನೆ ಜಾರಿಗೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಕಾಯ್ದಿರಿಸಿದೆ.




