ನವದೆಹಲಿ: ದೆಹಲಿಯ ಜಂತರ್ ಮಂತರ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರ ‘ಇಂಡಿಯಾ’ ಒಕ್ಕೂಟದ ಪ್ರಮುಖ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿರುವ ರೀತಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.
ಮತದಾರರ ಪಟ್ಟಿ ಅಕ್ರಮಗಳು, ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಚುನಾವಣಾ ಆಯೋಗದ ಹೊಣೆಗಾರಿಕೆಯನ್ನು ಪ್ರಶ್ನಿಸಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಬಲಪ್ರಯೋಗದ ಮೂಲಕ ತಡೆಯಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಘಟನೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೇಸ್ ನಾಯಕ ಸಿದ್ದರಾಮಯ್ಯ ಅವರು, ದೆಹಲಿ ಪೊಲೀಸರ ನಡೆ ಪ್ರಜಾಪ್ರಭುತ್ವ ವಿರೋಧಿ ಎಂದು ಖಂಡಿಸಿದ್ದಾರೆ.
“ಪ್ರತಿಪಕ್ಷದ ನಾಯಕರನ್ನು ಬಲವಂತವಾಗಿ ಎಳೆದಾಡಿ ವಶಕ್ಕೆ ಪಡೆದಿರುವುದು ತೀವ್ರ ಕಳವಳಕಾರಿ. ಪ್ರಜಾಪ್ರಭುತ್ವದಲ್ಲಿ ಸಾರ್ವಜನಿಕ ಮತ್ತು ರಾಜಕೀಯ ನಾಯಕರಿಗೆ ತಮ್ಮ ಧ್ವನಿ ಎತ್ತಲು ಹಕ್ಕಿದೆ. ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಇಂತಹ ಪೊಲೀಸ್ ದೌರ್ಜನ್ಯ ಮತ್ತು ದಮನಕಾರಿ ನೀತಿಗಳು ಸ್ವೀಕಾರಾರ್ಹವಲ್ಲ,” ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಪಾರದರ್ಶಕತೆ ಮತ್ತು ಮುಕ್ತ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ಸೂಕ್ತ ಉತ್ತರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.





Leave a comment