ದಾವಣಗೆರೆ: ಕರ್ನಾಟಕ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ-2026ರ ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಮತದಾನಕ್ಕಾಗಿ ಚುನಾವಣಾ ಮತದಾನ ಕೇಂದ್ರಗಳ ಸುತ್ತಮುತ್ತ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಸಾರ್ವಜನಿಕ ಶಾಂತಿ ಕದಡದಂತೆ ಎಚ್ಚರಿಕೆ ವಹಿಸಲು ದಾವಣಗೆರೆ ಮಹಾನಗರ ಪಾಲಿಕೆ , ದಾವಣಗೆರೆ ತಾಲ್ಲೂಕು ಮತ್ತು ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ ಅಕ್ಟೋಬರ್ 21ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 23ರ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ 48 ಗಂಟೆಗಳ ಪೂರ್ವದಲ್ಲಿ ಮತದಾನ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಅವರು ಆದೇಶಿಸಿದ್ದಾರೆ.
ನಿಬಂಧನೆಗಳು:
ನಿಷೇಧಾಜ್ಞೆ ಜಾರಿಮಾಡಿದ ಅವಧಿಯಲ್ಲಿ ಅಕ್ಟೋಬರ್ 23 ರಂದು ಮತದಾನ ಕೇಂದ್ರಗಳಿಗೆ ಮತ ಹಾಕಲು ಬರುವ ಮತದಾರರನ್ನು ಹೊರತುಪಡಿಸಿ ಉಳಿದಂತೆ 05 ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ ಇತರೆ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಯಾವುದೇ ಸಂಘಟನೆಗಳು/ರಾಜಕೀಯ ಪಕ್ಷಗಳು/ಧಾರ್ಮಿಕ ಪಂಗಡಗಳು ಮೆರವಣಿಗೆ ಮಾಡತಕ್ಕದ್ದಲ್ಲ ಹಾಗೂ ಪ್ರತಿಭಟನೆ ನಡೆಸತಕ್ಕದ್ದಲ್ಲ.
ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು, ಕಲ್ಲು, ಇಟ್ಟಿಗೆ, ಚಾಕು, ಕೋಲುಗಳು ಬಂದೂಕುಗಳು ಅಥವಾ ಮಾರಾಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದು / ಶೇಖರಿಸುವುದನ್ನು ನಿಷೇಧಿಸಿದೆ.
ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನ್ನು ಮತ್ತು ಶೇಖರಿಸುವುದನ್ನು ನಿಷೇಧಿಸಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಾಕಾಸ್ತ್ರ, ಸ್ಫೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಯವರಿಗೆ ಅಧಿಕಾರವಿರುತ್ತದೆ. ಮತ್ತು ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಾಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವುದು. ಐದು ಅಥವಾ ಇದಕ್ಕಿಂತ ಹೆಚ್ಚು ಜನರು ಗುಂಪುಗುಂಪಾಗಿ ನಿಲ್ಲುವುದನ್ನು ಹಾಗೂ ಓಡಾಡುವುದನ್ನು ನಿಷೇಧಿಸಿದೆ.
ಭಾಷಣ ಮಾಡುವುದು ಹಾಗೂ ಪ್ರಚೋದನಾಕಾರಿಯಾಗಿ ಮಾತನಾಡುವುದನ್ನು ನಿಷೇಧಿಸಿದೆ. ಸದರಿ ಸ್ಥಳಗಳಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ / ದಹನ ಮಾಡುವುದನ್ನು ನಿಬಂಧಿಸಲಾಗಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಮತಗಟ್ಟೆಯ ಒಳಗಡೆ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. (ಚುನಾವಣಾ ಕಾರ್ಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ/ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು/ ಸಿಬ್ಬಂದಿಗಳನ್ನು ಹೊರತುಪಡಿಸಿ)
ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ / ಬ್ಯಾನರ್ ಅಥವಾ ಇನ್ಯಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.
ಕಲ್ಯಾಣ ಮಂಟಪಗಳು / ಸಮುದಾಯ ಭವನಗಳು / ಹೊಟೇಲ್ಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸುವುದು. ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 126 ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.
ಈ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಲು ಪೊಲೀಸ್ ಅಧಿಕಾರಿಗಳಿಗೆ ಈ ಮೂಲಕ ಆದೇಶಿಸಿರುತ್ತೇನೆ. ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಆದೇಶಿಸಿದ್ದಾರೆ.





Leave a comment