Home ದಾವಣಗೆರೆ ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಮೂಲಕ ರಾಜಕೀಯ ಅಸ್ಥಿರತೆ ಉಂಟುಮಾಡಲು ಕಾಂಗ್ರೆಸ್ ಯತ್ನ ಫಲಿಸದು: ಹರೀಶ್ ದ್ವಿವೇದಿ
ದಾವಣಗೆರೆನವದೆಹಲಿಬೆಂಗಳೂರು

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಮೂಲಕ ರಾಜಕೀಯ ಅಸ್ಥಿರತೆ ಉಂಟುಮಾಡಲು ಕಾಂಗ್ರೆಸ್ ಯತ್ನ ಫಲಿಸದು: ಹರೀಶ್ ದ್ವಿವೇದಿ

Share
ದೇಶ
Share

ಚಿತ್ರದುರ್ಗ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಕಾಂಗ್ರೆಸ್ ಪಕ್ಷ ಅಪನಂಬಿಕೆ ಮೂಡಿಸುತ್ತಿದ್ದು, ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಮೂಲಕ ರಾಜಕೀಯ ಅಸ್ಥಿರತೆ ಉಂಟುಮಾಡಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ಆರೋಪಿಸಿದರು.

ನಗರದಲ್ಲಿ ದೇಶವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಡೆಸುತ್ತಿವೆ ಎನ್ನಲಾದ ಷಡ್ಯಂತ್ರಗಳ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಜಾಗೃತಿ ಅಭಿಯಾನದ ಅಂಗವಾಗಿ ನಡೆದ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗ, ಇವಿಎಂ ಹಾಗೂ ಸುಪ್ರೀಂ ಕೋರ್ಟ್‌ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಚುನಾವಣಾ ಸೋಲಿನ ಸಂದರ್ಭದಲ್ಲಿ ಟೀಕಿಸುವ ಮೂಲಕ ಅವುಗಳ ಗೌರವಕ್ಕೆ ಧಕ್ಕೆ ತರುತ್ತಿದೆ ಎಂದು ಆಕ್ಷೇಪಿಸಿದರು.

ರಾಹುಲ್ ಗಾಂಧಿ ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ದೇಶಾದ್ಯಂತ ಓಡಾಡುತ್ತಾರೆ. ಆದರೆ, ಅವರು ಪ್ರದರ್ಶಿಸುವ ಸಂವಿಧಾನದ ಪುಸ್ತಕದ ಒಳಗೆ ಖಾಲಿ ಪುಟಗಳಿದ್ದವು ಎಂಬುದನ್ನು ಜನರು ಗಮನಿಸಿದ್ದಾರೆ. ರಾಹುಲ್ ಗಾಂಧಿ ಅವರ ರಾಜಕೀಯ ನಿಲುವು ಮತ್ತು ವ್ಯಕ್ತಿತ್ವ ಏನೆಂಬುದು ದೇಶದ ಜನರಿಗೆ ಈಗಾಗಲೇ ತಿಳಿದಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಪಕ್ಷ ಎಂದಿಗೂ ದೇಶದ ಹಿತದೃಷ್ಟಿಯಿಂದ ಕೆಲಸ ಮಾಡಿಲ್ಲ. ದೇಶದ ಅಭಿವೃದ್ಧಿ ಹಾಗೂ ರಾಷ್ಟ್ರದ ಹಿತಕ್ಕೆ ಪೂರಕವಾದ ಕಾರ್ಯಗಳಿಗೂ ವಿರೋಧ ವ್ಯಕ್ತಪಡಿಸುತ್ತಾ ಬಂದಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ವಿಚಾರದಲ್ಲಿಯೂ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ದೇಶದ ಮಹಾನ್ ನಾಯಕರನ್ನು ಗೌರವಿಸುವ ಬದಲು ಅಪಮಾನಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕದ ಕಾಂಗ್ರೆಸ್ ಸರಕಾರವೂ ಜನರ ನಿರೀಕ್ಷೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಉತ್ತರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠವಾಗಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್: ಬಿ. ಶ್ರೀರಾಮುಲು

ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.

‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಉದ್ದೇಶದಿಂದ ಬಿಜೆಪಿ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್‌ನ ನಿಲುವುಗಳನ್ನು ಜನರಿಗೆ ತಿಳಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.

1975ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ತಮ್ಮ ಅಧಿಕಾರದ ಕುರ್ಚಿಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರು. ಆಗ ದೇಶದಲ್ಲಿ ಯುದ್ಧದಂತಹ ಯಾವುದೇ ತುರ್ತು ಪರಿಸ್ಥಿತಿ ಇರಲಿಲ್ಲ. ಆದರೂ ಸತತ 21 ತಿಂಗಳ ಕಾಲ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕತ್ತಲಲ್ಲಿಡಲಾಗಿತ್ತು ಎಂದು ಆಕ್ಷೇಪಿಸಿದರು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ್ ಸೇರಿದಂತೆ ಅನೇಕ ರಾಜಕೀಯ ನಾಯಕರನ್ನು ಜೈಲಿಗೆ ಹಾಕಲಾಗಿತ್ತು. ಪತ್ರಕರ್ತರನ್ನೂ ಬಂಧಿಸಲಾಗಿತ್ತು. ನಾಗರಿಕರ ಮೂಲಭೂತ ಹಕ್ಕುಗಳನ್ನು ನಿರ್ಬಂಧಿಸಲಾಗಿತ್ತು. ಅಷ್ಟೇ ಅಲ್ಲದೆ, ಸಂವಿಧಾನಕ್ಕೆ ತಿದ್ದುಪಡಿಗಳನ್ನು ತಂದು ಅದರ ಮೂಲ ಆಶಯಗಳಿಗೆ ಧಕ್ಕೆ ತರುವ ಪ್ರಯತ್ನ ಮಾಡಲಾಗಿತ್ತು ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ತನ್ನ ಆಡಳಿತಾವಧಿಯಲ್ಲಿ 75 ಬಾರಿ ಸಂವಿಧಾನಕ್ಕೆ ತಿದ್ದುಪಡಿ ತಂದಿದೆ ಎಂದು ದೂರಿದ ಅವರು, ಇದೀಗ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ದೇಶದ ಚುನಾವಣಾ ವ್ಯವಸ್ಥೆಯ ಬಗ್ಗೆ ಜನರಲ್ಲಿ ಅನುಮಾನ ಮೂಡಿಸುವುದು ಕಾಂಗ್ರೆಸ್‌ನ ರಾಜಕೀಯ ತಂತ್ರವಾಗಿದೆ ಎಂದು ಟೀಕಿಸಿದರು.

ಕಾಂಗ್ರೆಸ್‌ನ ಇಂತಹ ರಾಜಕೀಯ ನಿಲುವುಗಳಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ರಕ್ಷಣೆಗೆ ಬಿಜೆಪಿ ಸದಾ ಬದ್ಧವಾಗಿದೆ ಎಂದರು.

ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ: ಗೋವಿಂದ ಕಾರಜೋಳ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇದೇ ಮೊದಲ ಬಾರಿಗೆ ನಡೆಯುತ್ತಿಲ್ಲ. ಈ ಹಿಂದೆ ಹಲವು ಬಾರಿ ಇಂತಹ ಪ್ರಕ್ರಿಯೆಗಳು ನಡೆದಿವೆ. ಆದರೆ, ಕಾಂಗ್ರೆಸ್ ನಾಯಕರು ಇದೀಗ ಅನಗತ್ಯ ವಿವಾದ ಸೃಷ್ಟಿಸುತ್ತಿದ್ದಾರೆ ಎಂದು ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದರು.

‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಈವರೆಗೆ 12 ಬಾರಿ ಎಸ್‌ಐಆರ್ ಪ್ರಕ್ರಿಯೆ ನಡೆದಿದೆ. ಈ ಪೈಕಿ 10 ಬಾರಿ ಕಾಂಗ್ರೆಸ್ ಆಡಳಿತಾವಧಿಯಲ್ಲಿಯೇ ಈ ಪ್ರಕ್ರಿಯೆ ನಡೆದಿದ್ದರೂ, ಈಗ ಅದೇ ಪಕ್ಷ ವಿರೋಧ ವ್ಯಕ್ತಪಡಿಸುತ್ತಿರುವುದು ರಾಜಕೀಯ ದ್ವಂದ್ವಕ್ಕೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

ರಾಹುಲ್ ಗಾಂಧಿ ಅವರು ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಗೊಂದಲ ಸೃಷ್ಟಿಸುವ ಮೂಲಕ ಪ್ರಧಾನಿ ಹುದ್ದೆಗೇರಲು ಪ್ರಯತ್ನಿಸುತ್ತಿದ್ದಾರೆ. ನ್ಯಾಯಾಂಗದ ವಿರುದ್ಧ ಅಪಸ್ವರ ಎತ್ತುವುದು, ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಪ್ರಶ್ನಿಸುವುದು ಸೇರಿದಂತೆ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದರು.

ನೀಟ್ ಪರೀಕ್ಷೆಯ ವಿಚಾರದಲ್ಲಿಯೂ ಕಾಂಗ್ರೆಸ್ ಅಪಪ್ರಚಾರ ನಡೆಸಿದೆ. ಮತಗಳ್ಳತನದ ಆರೋಪಗಳನ್ನು ಮಾಡುವ ಮೂಲಕ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕುಂದಿಸಲು ಪ್ರಯತ್ನಿಸುತ್ತಿದೆ. ದೇಶದ ಸಾಂವಿಧಾನಿಕ ವ್ಯವಸ್ಥೆ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ನಿರಾಧಾರ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದರು.

ರಾಹುಲ್ ಗಾಂಧಿ ಅವರ ರಾಜಕೀಯ ಪ್ರಬುದ್ಧತೆಯ ಬಗ್ಗೆ ಜನರಲ್ಲಿಯೇ ಪ್ರಶ್ನೆಗಳಿವೆ. ಕೈ ಎತ್ತಿ ನನ್ನನ್ನು ಪ್ರಧಾನಿಯನ್ನಾಗಿ ಮಾಡಿ ಎಂದು ಜನರನ್ನು ಕೇಳುವ ದಿನವೂ ದೂರವಿಲ್ಲ ಎಂದು ವ್ಯಂಗ್ಯವಾಡಿದರು.

ಬಿಜೆಪಿ ನಾಯಕರಿಂದ ಪಾದಯಾತ್ರೆ

ಪಾದಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಶಾಸಕರಾದ ಎಂ. ಚಂದ್ರಪ್ಪ, ಎಸ್. ಸುರೇಶ್ ಗೌಡ, ಜಿ.ಬಿ. ಜ್ಯೋತಿ ಗಣೇಶ್, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಟಿ. ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Share

Leave a comment

Leave a Reply

Your email address will not be published. Required fields are marked *

Recent Posts

Recent Comments

No comments to show.
Related Articles