ಬೆಂಗಳೂರು: ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಆಗುತ್ತಿರುವ ಅನ್ಯಾಯ ಹಾಗೂ ಪ್ರಾತಿನಿಧ್ಯದ ಕೊರತೆಯ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಖುದ್ದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ವಿವಿಧ ಸಂಸ್ಥೆಗಳ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಿಸುತ್ತಿರುವ ಮೆಂಝಿಸ್ ಎವಿಯೇಷನ್, ಡಿಎಚ್‌ಎಲ್ ಎಕ್ಸ್‌ಪ್ರೆಸ್, ಏರ್ ಇಂಡಿಯಾ, ತಾಜ್ ಹೋಟೆಲ್, ಬ್ಲೂ ಡಾರ್ಟ್ ಸೇರಿದಂತೆ ಒಟ್ಟು 14 ಪ್ರಮುಖ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಮಾನವ ಸಂಪನ್ಮೂಲ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ಸ್ಥಳೀಯ ಕನ್ನಡಿಗರಿಗೆ ನ್ಯಾಯಯುತ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಲಾಗಿದ್ದು, ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ನಾರಾಯಣಗೌಡ ತಿಳಿಸಿದ್ದಾರೆ.
ಉದ್ಯೋಗ ಹೆಚ್ಚಳಕ್ಕೆ ಭರವಸೆ: ಈಗಾಗಲೇ ಸ್ಥಳೀಯರಿಗೆ ಉದ್ಯೋಗ ನೀಡಿರುವುದಾಗಿ ತಿಳಿಸಿರುವ ಸಂಸ್ಥೆಗಳು, ಮುಂದಿನ ಒಂದು ವರ್ಷದೊಳಗೆ ಕನ್ನಡಿಗರ ಉದ್ಯೋಗಾವಕಾಶಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವುದಾಗಿ ಭರವಸೆ ನೀಡಿವೆ.
14 ಪ್ರಮುಖ ಸಂಸ್ಥೆಗಳ ಭಾಗಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ, ಏರ್ ಇಂಡಿಯಾ ಸ್ಯಾಟ್ಸ್, ಶಾಪರ್ ಸ್ಟಾಪ್, ಸ್ಟಾರ್ ಏರ್‌ಲೈನ್ಸ್ ಸೇರಿದಂತೆ 14 ಪ್ರಮುಖ ಸಂಸ್ಥೆಗಳ ಸಿಇಒಗಳು ಹಾಗೂ ಎಚ್‌ಆರ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪೊಲೀಸ್ ಅಧಿಕಾರಿಗಳ ಉಪಸ್ಥಿತಿ: ಯಾವುದೇ ಗೊಂದಲ ಅಥವಾ ಅಪಪ್ರಚಾರಕ್ಕೆ ಅವಕಾಶವಿಲ್ಲದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಸಭೆಯನ್ನು ಅತ್ಯಂತ ಸೌಹಾರ್ದಯುತವಾಗಿ ನಡೆಸಲಾಗಿದೆ ಎಂದು ಕರವೇ ರಾಜ್ಯಾಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಸಂಸ್ಥೆಗಳ ಮುಖಂಡರು ನಮ್ಮನ್ನು ಪ್ರೀತಿ ಮತ್ತು ಗೌರವದಿಂದ ನಡೆಸಿಕೊಂಡಿದ್ದಾರೆ ಎಂದಿರುವ ಟಿ.ಎ. ನಾರಾಯಣಗೌಡ, ಕರವೇ ನಡೆಸುತ್ತಿರುವ ಈ ಹೋರಾಟವು ಮುಂದಿನ ಪೀಳಿಗೆಯ ಕನ್ನಡಿಗರಿಗೆ ಭದ್ರ ಬುನಾದಿ ಹಾಕಿಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.





Leave a comment