ದಾವಣಗೆರೆ: ಕಾಂಗ್ರೆಸ್ ನಾಯಕರನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬೀ ಸಮುದ್ರಕ್ಕೆ ಬಿಸಾಡಬೇಕು ಎಂದು ಹಿಂಸಾತ್ಮಕ ಹೇಳಿಕೆ ನೀಡಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೆಪಿಸಿಸಿ ಮುಖ್ಯ ವಕ್ತಾರ ಡಿ. ಬಸವರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಲಾರದಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ನಾರಾಯಣಸ್ವಾಮಿ ನೀಡಿರುವ ಈ ಹೇಳಿಕೆಯು ಬಿಜೆಪಿಯ ಫ್ಯಾಸಿಸ್ಟ್ ಮನಸ್ಥಿತಿ ಹಾಗೂ ಗುಂಡಾ ಶೈಲಿಯನ್ನು ತೋರಿಸುತ್ತದೆ ಎಂದು ಅವರು ವಾಗ್ದಾಳಿ ನಡೆಸಿದರು.
ಸಂವಿಧಾನಬದ್ಧ ಹುದ್ದೆಯಲ್ಲಿದ್ದುಕೊಂಡು ಕೊಲೆಗೆ ಪ್ರಚೋದನೆ ನೀಡುವ ರೀತಿಯಲ್ಲಿ ಬಹಿರಂಗ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ಮತ್ತು ಕಾನೂನು ಸುವ್ಯವಸ್ಥೆಗೆ ಎಸಗಿದ ದ್ರೋಹ ಎಂದು ಬಸವರಾಜ್ ಕುಟುಕಿದರು.
ಹಿಂಸಾತ್ಮಕ ಹೇಳಿಕೆಗೆ ಬಹಿರಂಗ ಕ್ಷಮೆಯಾಚನೆಗೆ ಒತ್ತಾಯ: ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯದ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರಲ್ಲಿ ತಕ್ಷಣವೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಡಿ. ಬಸವರಾಜ್ ಆಗ್ರಹಿಸಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆ ಹಾಗೂ ಬಂಧನಕ್ಕೆ ಆಗ್ರಹ: ಈ ಪ್ರಚೋದನಾತ್ಮಕ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಒಪ್ಪಿಗೆ ಇದೆಯೇ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು. ಹಿಂಸೆಯಲ್ಲಿ ನಂಬಿಕೆಯಿಲ್ಲದಿದ್ದರೆ ಅವರನ್ನು ತಕ್ಷಣವೇ ಬಿಜೆಪಿಯಿಂದ ಉಚ್ಚಾಟಿಸಬೇಕು ಮತ್ತು ಪೊಲೀಸರು ಬಂಧಿಸಬೇಕು ಎಂದು ಒತ್ತಾಯಿಸಿದರು.
ಸಂಘ ಪರಿವಾರದ ಬಳಸಿ ಬಿಸಾಡುವ ಸಂಸ್ಕೃತಿ: ಆರೆಸ್ಸೆಸ್ ಮತ್ತು ಬಿಜೆಪಿಯನ್ನು ಮೆಚ್ಚಿಸಲು ಹಾಗೂ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಛಲವಾದಿ ನಾರಾಯಣಸ್ವಾಮಿ ಯತ್ನಿಸುತ್ತಿದ್ದಾರೆ. ದಲಿತ ನಾಯಕ ಎಂಬ ಕಾರಣಕ್ಕೆ ಅವರನ್ನು ಬಳಸಿಕೊಂಡು ಕಾಂಗ್ರೆಸ್ ಹಿರಿಯ ನಾಯಕರ ವಿರುದ್ಧ ಬಿಜೆಪಿ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಈಗಾಗಲೇ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಪೊಲೀಸ್ ದೂರು ದಾಖಲಾಗಿದ್ದು, ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ತಕ್ಷಣವೇ ಸೂಕ್ತ ಕಾನೂನು ಕ್ರಮ ಜರುಗಿಸಿ ಅವರನ್ನು ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.
ಗೋಷ್ಠಿಯಲ್ಲಿ ಕೆಪಿಸಿಸಿ ಸಂಶೋಧನೆ ಮತ್ತು ತರಬೇತಿ ವಿಭಾಗದ ಸಂಚಾಲಕ ಹಾಗೂ ಕಾಂಗ್ರೆಸ್ ಎಸ್ಸಿ ಘಟಕದ ಉಪಾಧ್ಯಕ್ಷ ಬಿ. ಎನ್. ವಿನಾಯಕ್, ಮಹಾನಗರ ಪಾಲಿಕೆ ಮಾಜಿ ಮೇಯರ್ ಕೆ. ಚಮನ್ ಸಾಬ್ ಮತ್ತಿತರರು ಹಾಜರಿದ್ದರು.





Leave a comment