ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಮಾನ, ಮರ್ಯಾದೆ ಇದೆಯೇ ಎಂದು ಪ್ರಶ್ನಿಸಿರುವ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮೂರೂವರೆ ವರ್ಷಗಳ ಆಡಳಿತದಲ್ಲಿ ಜನರಿಗೆ ನೀಡಿರುವ ಕೊಡುಗೆ ನಿರಂತರ ಬೆಲೆ ಏರಿಕೆ ಮಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಸರಕಾರದ ನಿರಂತರ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಈ ಪ್ರತಿಭಟನೆಯಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವ ವಹಿಸಿದ್ದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದು, ಸ್ಟಾಂಪ್ ಡ್ಯೂಟಿ ಏರಿಕೆ ಹಾಗೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಾಲಿನ ದರವನ್ನು ಲೀಟರ್‌ಗೆ 8 ರೂ.ಗಳಷ್ಟು ಏರಿಸುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದವರ ಬದುಕಿನ ಮೇಲೆ ಬರೆ ಎಳೆಯಲಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಬರಗಾಲದ ಸಂದರ್ಭದಲ್ಲಿ ರೈತರಿಗೆ ಸಮರ್ಪಕ ಪರಿಹಾರ ನೀಡದೆ, ಅತ್ಯಲ್ಪ ಮೊತ್ತ ನೀಡಿ ಅನ್ನದಾತರನ್ನು ಭಿಕ್ಷುಕರಂತೆ ಪರಿಗಣಿಸಲಾಗಿದೆ ಎಂದು ಟೀಕಿಸಿದರು.
ನಿರಂತರ ಬೆಲೆ ಏರಿಕೆ ಹಾಗೂ ತೆರಿಗೆ ಹೊರೆ: ಮೂರೂವರೆ ವರ್ಷಗಳ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ, ಪೆಟ್ರೋಲ್-ಡೀಸೆಲ್ ತೆರಿಗೆ, ಹಾಲಿನ ದರ ಮತ್ತು ಸ್ಟಾಂಪ್ ಡ್ಯೂಟಿ ಹೆಚ್ಚಳದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ.
ರೈತರ ಕಡೆಗಣನೆ: ಭೀಕರ ಬರಗಾಲದ ಸಂದರ್ಭದಲ್ಲಿ ರೈತರಿಗೆ ಸರಿಯಾದ ಪರಿಹಾರ ನೀಡದೆ ಕೇವಲ 2,500 ರೂ. ಘೋಷಿಸುವ ಮೂಲಕ ರೈತರನ್ನು ವಂಚಿಸಲಾಗಿದೆ ಎಂದು ಬಿಜೆಪಿ ಆಪಾದಿಸಿದೆ.
ಎನ್‌ಡಿಎ ಅಧಿಕಾರಕ್ಕೆ ಎಚ್ಚರಿಕೆ: ವಿಧಾನಪರಿಷತ್ ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಕ್ರೋಶಕ್ಕೆ ಸಾಕ್ಷಿಯಾಗಿದ್ದು, ಮುಂದಿನ ದಿನಗಳಲ್ಲಿ ಡಿಕೆ, ಬಿಕೆ, ಪಿಕೆ ಆಟ ನಡೆಯುವುದಿಲ್ಲ ಮತ್ತು ಎನ್‌ಡಿಎ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಮತ್ತು ಬೆಲೆ ಏರಿಕೆಯಿಂದ ಬೇಸತ್ತಿರುವ ಜನತೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಅವರು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ರಾಜ್ಯದಲ್ಲಿ ಅಧಿಕಾರಕ್ಕೇರುವುದು ನಿಶ್ಚಿತ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿಯ ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.





Leave a comment