ಬೆಗುಸರಾಯ್ (ಬಿಹಾರ): ಐದು ತಿಂಗಳ ಹಿಂದೆ ಐವರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 30 ವರ್ಷದ ವಿವಾಹಿತ ಮಹಿಳೆಯೊಬ್ಬರನ್ನು, ಪ್ರಕರಣ ಹಿಂಪಡೆಯುವಂತೆ ಒತ್ತಡ ಹೇರಿ ಮನೆಯ ಮಹಡಿಯಿಂದ ಕೆಳಗೆ ತಳ್ಳಿರುವ ಭೀಕರ ಘಟನೆ ಬಿಹಾರದ ಬೆಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಸುಮಾರು 12 ರಿಂದ 15 ಅಡಿ ಎತ್ತರದಿಂದ ಬಿದ್ದ ಪರಿಣಾಮ ಸಂತ್ರಸ್ತೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.
ಸೋಮವಾರ ರಾತ್ರಿ ಇಬ್ಬರು ಆರೋಪಿಗಳು ಮಹಿಳೆಯ ಮನೆಗೆ ನುಗ್ಗಿ, ಆಕೆಯನ್ನು ಟೆರೇಸ್‌ಗೆ ಕರೆದೊಯ್ದು ಕೆಳಗೆ ತಳ್ಳಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಭೋಂಗಲ್ ಕುಮಾರ್ ಅಲಿಯಾಸ್ ಭೋಂಗಲ್ ಮಹ್ತೋ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಹಳೆಯ ಪ್ರಕರಣ ಹಿಂಪಡೆಯಲು ನಿರಂತರ ಬೆದರಿಕೆ: ಕಳೆದ ಜೂನ್ ತಿಂಗಳಲ್ಲಿ ಮಹಿಳೆಯ ಪತಿಯನ್ನು ಕೋಣೆಯಲ್ಲಿ ಕೂಡಿಹಾಕಿ, ಐವರು ಕಾಮುಕರು ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಆ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿತ್ತು. ಅಂದಿನಿಂದಲೂ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ (Compromise) ಆರೋಪಿಗಳ ಕಡೆಯವರು ನಿರಂತರವಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಪೊಲೀಸರ ನಿರ್ಲಕ್ಷ್ಯದ ಆರೋಪ: ಅತ್ಯಾಚಾರ ಪ್ರಕರಣ ದಾಖಲಾದ ಮೂರು ತಿಂಗಳ ಬಳಿಕವೂ ದುಷ್ಕರ್ಮಿಗಳು ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಂತ್ರಸ್ತೆಯ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶ: ಈ ಘಟನೆಯು ಬಿಹಾರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಅವರು ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಬಿಹಾರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆಯನ್ನು ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬೆದರಿಕೆ ದೂರುಗಳನ್ನು ನಿರ್ಲಕ್ಷಿಸಿದ ಪೊಲೀಸರ ವಿರುದ್ಧವೂ ತನಿಖೆ ನಡೆಸುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.





Leave a comment