ಯಾದಗಿರಿ: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ನೂತನ ಪುತ್ಥಳಿಯನ್ನು ಅನಾವರಣಗೊಳಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರಾದ ಪ್ರಿಯಾಂಕ್ ಖರ್ಗೆ ಮಾತನಾಡುತ್ತಾ, ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷ ಬಿತ್ತುವವರೇ ನಿಜವಾದ ದೇಶದ್ರೋಹಿಗಳು ಎಂದು ತೀವ್ರವಾಗಿ ಟೀಕಿಸಿದ್ದಾರೆ.
ಸ್ವತಂತ್ರ ಭಾರತದಲ್ಲಿ ಸಂವಿಧಾನವೇ ಅತ್ಯುನ್ನತ ಶಕ್ತಿಯಾಗಿದ್ದು, ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರವಾದ ಹೋರಾಟ ಸದಾ ನಿರಂತರವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ತತ್ವಗಳು ನಮಗೆ ಸಮಾನತೆ, ಸ್ವಾಭಿಮಾನ ಮತ್ತು ವೈಜ್ಞಾನಿಕ ಚಿಂತನೆಯ ದಾರಿಯನ್ನು ತೋರಿಸುತ್ತವೆ. ಕೇವಲ ಮಹನೀಯರ ಪ್ರತಿಮೆಗಳನ್ನು ಸ್ಥಾಪಿಸುವುದಷ್ಟೇ ಸಾಲದು, ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಸಂವಿಧಾನವೇ ಶ್ರೇಷ್ಠ: ಸಂವಿಧಾನದ ಮೂಲಕ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಮತ್ತು ಮತದಾನದ ಹಕ್ಕು ದೊರಕಿಸಿಕೊಟ್ಟ ಅಂಬೇಡ್ಕರ್ ಅವರ ದೂರದೃಷ್ಟಿಯನ್ನು ಪ್ರತಿಯೊಬ್ಬರೂ ಅರಿಯಬೇಕು. ಯುವಕರು ವಾಟ್ಸಪ್ ಮಾಹಿತಿಯನ್ನು ಮಾತ್ರ ನಂಬದೆ, ಪುಸ್ತಕಗಳನ್ನು ಓದಿ ಇತಿಹಾಸ ಹಾಗೂ ದಾಖಲೆಗಳನ್ನು ಅಧ್ಯಯನ ಮಾಡಬೇಕು.
ಪುಸ್ತಕ ಸಂಸ್ಕೃತಿ ಬೆಳೆಸಿ: ಸಾರ್ವಜನಿಕರು ಹಾರ, ಶಾಲುಗಳ ಬದಲಿಗೆ ಪುಸ್ತಕಗಳನ್ನು ಉಡುಗೊರೆಯಾಗಿ ನೀಡುವಂತೆ ಮನವಿ ಮಾಡಿದ್ದು, ಪುಸ್ತಕ ಓದುವ, ಪ್ರಶ್ನಿಸುವ ಮತ್ತು ಅನ್ಯಾಯದ ವಿರುದ್ಧ ಧ್ವನಿ ಎತ್ತುವ ಸಂಸ್ಕೃತಿ ಬೆಳೆಯಬೇಕು ಎಂದು ತಿಳಿಸಿದರು.
ಪೊಲೀಸ್ ಠಾಣೆಗಳ ಸ್ಥಾಪನೆಗೆ ಭರವಸೆ: ಯಾದಗಿರಿ ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಕೂಡಲೇ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಂಬೇಡ್ಕರ್ ಪುತ್ಥಳಿಗೆ ಸ್ಥಳ ದಾನ ಮಾಡಿದವರು ಸೇರಿದಂತೆ ಸಹಕರಿಸಿದ 25 ಸಾಧಕರನ್ನು ಇದೇ ವೇಳೆ ಸನ್ಮಾನಿಸಲಾಯಿತು.
ದಲಿತರು ಶಿಕ್ಷಣ ಪಡೆದು ಉನ್ನತ ಸ್ಥಾನಕ್ಕೇರುವುದನ್ನು ಸಹಿಸದ ತಾರತಮ್ಯದ ಮನಸ್ಥಿತಿಗಳ ವಿರುದ್ಧ ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ನನ್ನ ಧ್ವನಿ ಸದಾ ಇರಲಿದೆ ಎಂದು ತಿಳಿಸಿರುವ ಸಚಿವರು, ಜನರ ಆಶೀರ್ವಾದ ಇರುವವರೆಗೆ ಯಾವುದೇ ಸವಾಲಿಗೂ ಹೆದರುವುದಿಲ್ಲ ಎಂದರು.





Leave a comment