
ಬೆಂಗಳೂರು: ಐಸಿಸಿ ಸಭೆ ನಡೆಸದೆ ಭದ್ರಾ ಡ್ಯಾಂನಿಂದ 1 ಟಿಎಂಸಿ ನೀರನ್ನು 10 ದಿನಗಳ ಕಾಲ 1000 ಕ್ಯೂಸೆಕ್ನಂತೆ ನಾಲೆಗಳಿಗೆ ಬಿಟ್ಟಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದ ದಾವಣಗೆರೆ ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ತೊಂದರೆಯಾಗಿದೆ ಎಂದು ಹೊನ್ನಾಳಿ ಕಾಂಗ್ರೆಸ್ ಶಾಸಕ ಡಿ.ಜಿ. ಶಾಂತನಗೌಡ ಹಾಗೂ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಕಳವಳ ವ್ಯಕ್ತಪಡಿಸಿದ್ದು, ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಕೂಡಲೇ ಐಸಿಸಿ ಸಭೆ ಕರೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.
ನ. 19ರ ನಾಳೆ ಗುರುವಾರ ಮಧ್ಯಾಹ್ನ ಭದ್ರ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಎಲ್ಲಾ ಶಾಸಕರ ಸಮ್ಮುಖದಲ್ಲಿ ಐಸಿಸಿ ಸಭೆ ನಡೆಯಲಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಪಡಬೇಕಾಗಿಲ್ಲ ಎಂದು ಶಾಸಕ ಡಿ.ಜಿ. ಶಾಂತನಗೌಡ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮ್ಮ ರಾಜೀನಾಮೆ ಪತ್ರವನ್ನು ವಾಪಸ್ ಪಡೆದಿರುವುದಾಗಿ ಅವರು ತಿಳಿಸಿದ್ದಾರೆ.
ಅವೈಜ್ಞಾನಿಕ ನೀರು ಬಿಡುಗಡೆಗೆ ಆಕ್ಷೇಪ:
ಐಸಿಸಿ ಸಭೆ ನಡೆಸದೆ 1 ಟಿಎಂಸಿ ನೀರನ್ನು ಬಿಟ್ಟಿರುವುದರಿಂದ ದಾವಣಗೆರೆ ಜಿಲ್ಲೆಯ ಭದ್ರ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆಗಿರುವ ತೊಂದರೆಯ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದೆ.
ಗುರುವಾರ ಐಸಿಸಿ ಸಭೆ:
ಕೂಡಲೇ ಐಸಿಸಿ ಸಭೆ ಕರೆಯುವಂತೆ ಕರ್ನಾಟಕ ನೀರಾವರಿ ನಿಗಮದ ಎಂಡಿಗೆ ಡಿಕೆಶಿ ಸೂಚನೆ ನೀಡಿದ್ದು, ಗುರುವಾರ ಮಧ್ಯಾಹ್ನ ಸಭೆ ನಿಗದಿಯಾಗಿದೆ. ರೈತರು ಆತಂಕ ಪಡಬೇಕಿಲ್ಲ.
ರಾಜೀನಾಮೆ ವಾಪಸ್:
ಭದ್ರಾ ನೀರಾವರಿ ವಿಚಾರವಾಗಿ ಎದ್ದಿದ್ದ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ನೀಡಿದ್ದ ರಾಜೀನಾಮೆ ಪತ್ರವನ್ನು ವಾಪಸ್ ಪಡೆದಿರುವುದಾಗಿ ಶಾಸಕ ಡಿ.ಜಿ. ಶಾಂತನಗೌಡ ತಿಳಿಸಿದ್ದಾರೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಉಪಸ್ಥಿತರಿದ್ದರು.
ಈ ಮಧ್ಯೆ, ಶಾಸಕ ಶಾಂತನಗೌಡ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ನಾಳೆಯ ಐಸಿಸಿ ಸಭೆಯ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.




