
ದಾವಣಗೆರೆ: ಸಾರ್ವಜನಿಕರಿಗೆ ಇ-ಖಾತಾ ಸೇವೆ ಒದಗಿಸುವಲ್ಲಿ ಅನಗತ್ಯ ವಿಳಂಬವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಅರ್ಹ ಫಲಾನುಭವಿಗಳಿಗೆ ಸರಳ, ತ್ವರಿತ ಹಾಗೂ ಪಾರದರ್ಶಕವಾಗಿ ಇ-ಖಾತಾ ಪ್ರಮಾಣಪತ್ರ ವಿತರಿಸಲು ಆದ್ಯತೆ ನೀಡಬೇಕು ಎಂದು ಶಾಸಕ ಸಮರ್ಥ್ ಶಾಮನೂರು ಸೂಚಿಸಿದರು.
ನಗರದ ಮಹಾನಗರಪಾಲಿಕೆಯ ವಲಯ–1 ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿರುವ ‘ನಿಮ್ಮ ಖಾತಾ, ನಿಮ್ಮ ಹಕ್ಕು’ ವಿಶೇಷ ಇ-ಖಾತಾ ಅಭಿಯಾನಕ್ಕೆ ಭೇಟಿ ನೀಡಿ, ಅರ್ಜಿ ಸ್ವೀಕಾರ, ದಾಖಲೆಗಳ ಪರಿಶೀಲನೆ ಹಾಗೂ ಇ-ಖಾತಾ ವಿತರಣಾ ಪ್ರಕ್ರಿಯೆಯ ಕಾರ್ಯವೈಖರಿಯನ್ನು ಪರಿಶೀಲಿಸಿದ ಬಳಿಕ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.
ಇ-ಖಾತಾ ಅಭಿಯಾನದ ಅಂಗವಾಗಿ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಅರ್ಜಿ ಸಲ್ಲಿಕೆ ಸಂದರ್ಭದಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಅಗತ್ಯ ದಾಖಲೆಗಳ ಲಭ್ಯತೆ ಹಾಗೂ ಪ್ರಮಾಣಪತ್ರ ಪಡೆಯುವಲ್ಲಿನ ತೊಂದರೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಫಲಾನುಭವಿಗೆ ಇ-ಖಾತಾ ವಿತರಣೆ: ಇದೇ ಸಂದರ್ಭದಲ್ಲಿ ಸ್ಥಳದಲ್ಲಿಯೇ ಇ-ಖಾತಾ ಪ್ರಕ್ರಿಯೆ ಪೂರ್ಣಗೊಂಡ ಫಲಾನುಭವಿಯೊಬ್ಬರಿಗೆ ಶಾಸಕ ಸಮರ್ಥ್ ಶಾಮನೂರು ಸ್ವತಃ ಇ-ಖಾತಾ ಪ್ರಮಾಣಪತ್ರ ವಿತರಿಸಿದರು. ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಇಂತಹ ವಿಶೇಷ ಅಭಿಯಾನಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು.
ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಪದೇ ಪದೇ ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು. ಅರ್ಜಿ ಸಲ್ಲಿಕೆಯಿಂದ ಪ್ರಮಾಣಪತ್ರ ವಿತರಣೆಯವರೆಗಿನ ಪ್ರತಿಯೊಂದು ಹಂತದಲ್ಲಿಯೂ ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡಬೇಕು. ದಾಖಲೆಗಳಲ್ಲಿ ನ್ಯೂನತೆಗಳಿದ್ದರೆ ಅವುಗಳ ಕುರಿತು ಅರ್ಜಿದಾರರಿಗೆ ಸ್ಪಷ್ಟ ಮಾಹಿತಿ ನೀಡಿ, ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಸೇವೆಗಳಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಜನಸ್ನೇಹಿ ಆಡಳಿತಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ಅರ್ಹ ಫಲಾನುಭವಿಗಳಿಗೆ ನಿಗದಿತ ಅವಧಿಯಲ್ಲಿ ಇ-ಖಾತಾ ಪ್ರಮಾಣಪತ್ರ ದೊರೆಯುವಂತೆ ನೋಡಿಕೊಳ್ಳಬೇಕು. ಸಾರ್ವಜನಿಕರಿಂದ ದೂರುಗಳು ಬಾರದ ರೀತಿಯಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಹಾನಗರಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.




