
ದಾವಣಗೆರೆ/ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗ್ರಾಮೀಣ ಮೂಲಸೌಕರ್ಯಗಳನ್ನು ಬಲಪಡಿಸುವುದು ಹಾಗೂ ಹಿಂದುಳಿದ ವರ್ಗಗಳ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಒಟ್ಟು ₹15 ಕೋಟಿ ಅನುದಾನ ಮಂಜೂರು ಮಾಡುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ರಾಜ್ಯ ಸರ್ಕಾರದ ಸಂಬಂಧಪಟ್ಟ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ ಅವರನ್ನು ಭೇಟಿ ಮಾಡಿದ ಸಂಸದರು, ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ₹10 ಕೋಟಿ ವಿಶೇಷ ಅನುದಾನ ಒದಗಿಸುವಂತೆ ಕೋರಿದ್ದಾರೆ.
ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಮುದಾಯ ಭವನಗಳ ನಿರ್ಮಾಣ ಹಾಗೂ ಅಭಿವೃದ್ಧಿ, ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲಸೌಕರ್ಯಗಳ ಕಲ್ಪನೆ, ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಲಭ್ಯ ಹಾಗೂ ಸಾರ್ವಜನಿಕರ ಬಳಕೆಗೆ ಅಗತ್ಯವಿರುವ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ₹5 ಕೋಟಿ
ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ತಲಾ ₹1 ಕೋಟಿ ವೆಚ್ಚದ ಐದು ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಒಟ್ಟು ₹5 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಈಶ್ವರ ಬಿ. ಖಂಡ್ರೆ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.
ಗ್ರಾಮೀಣ ಭಾಗದ ಸಾರ್ವಜನಿಕರ ಸುಗಮ ಸಂಚಾರ, ರೈತರ ಕೃಷಿ ಉತ್ಪನ್ನಗಳ ಸಾಗಣೆ, ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಹಾಗೂ ಗ್ರಾಮಗಳ ನಡುವಿನ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು ಗುಣಮಟ್ಟದ ರಸ್ತೆಗಳ ನಿರ್ಮಾಣ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತಾವಿತ ರಸ್ತೆ ಕಾಮಗಾರಿಗಳಿಗೆ ಆದ್ಯತೆಯ ಮೇರೆಗೆ ಅನುದಾನ ಮಂಜೂರು ಮಾಡುವಂತೆ ಕೋರಿದ್ದಾರೆ.
ಸಮಗ್ರ ಅಭಿವೃದ್ಧಿಗೆ ಆದ್ಯತೆ
ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳು ದೊರೆಯಬೇಕು. ಹಿಂದುಳಿದ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣ, ಗ್ರಾಮೀಣ ರಸ್ತೆ ಸಂಪರ್ಕದ ಸುಧಾರಣೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಕ್ಷೇತ್ರದ ಜನರ ಬೇಡಿಕೆಗಳಿಗೆ ಸ್ಪಂದಿಸಿ, ಪ್ರಸ್ತಾವಿತ ಕಾಮಗಾರಿಗಳಿಗೆ ಅಗತ್ಯ ಅನುದಾನ ದೊರಕಿಸಿಕೊಡಲು ನಿರಂತರ ಪ್ರಯತ್ನಿಸಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.




