
ಬೆಂಗಳೂರು: ಜಗಜ್ಯೋತಿ ಬಸವಣ್ಣನವರ ಕುರಿತು ಲೇಖಕ ರವಿ ಹಂಜ್ ಅವರು ನೀಡಿರುವ ಆಧಾರರಹಿತ, ಸುಳ್ಳು ಹಾಗೂ ಅವಹೇಳನಕಾರಿ ಹೇಳಿಕೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತೀವ್ರವಾಗಿ ಖಂಡಿಸಿದ್ದು, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ತಿಳಿಸಿದ್ದಾರೆ.
12ನೇ ಶತಮಾನದಲ್ಲಿಯೇ ಜಾತಿ, ವರ್ಣ, ಲಿಂಗ ಮತ್ತು ವರ್ಗಭೇದಗಳನ್ನು ತಿರಸ್ಕರಿಸಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ವಿಶ್ವಗುರು ಬಸವಣ್ಣನವರ ಗೌರವಕ್ಕೆ ಧಕ್ಕೆ ತರುವಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ಧಾರ: ಬಸವಣ್ಣನವರ ಕುರಿತು ರವಿ ಹಂಜ್ ನೀಡಿರುವ ಹೇಳಿಕೆಗಳನ್ನು ಮಹಾಸಭಾ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಕೋಟ್ಯಂತರ ಭಕ್ತರ ಭಾವನೆಗಳಿಗೆ ನೋವುಂಟುಮಾಡಿರುವ ಇವರ ವಿರುದ್ಧ ಕಾನೂನುಬದ್ಧವಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಐತಿಹಾಸಿಕ ವ್ಯಕ್ತಿಗಳ ತೇಜೋವಧೆ ಖಂಡನೀಯ: ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಐತಿಹಾಸಿಕ ವ್ಯಕ್ತಿಗಳ ಘನತೆ ಮತ್ತು ಸಮಾಜದ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಆಧಾರರಹಿತ ಹೇಳಿಕೆ ನೀಡುವುದು ಸರಿಯಲ್ಲ. ಸತ್ಯಾಸತ್ಯತೆ ಪರಿಶೀಲಿಸದೆ ಮನಬಂದಂತೆ ಮಾತನಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದನ್ನು ಸಹಿಸಲು ಸಾಧ್ಯವಿಲ್ಲ.
ಕಾನೂನು ಹೋರಾಟಕ್ಕೆ ಮಹಾಸಭಾ ಬದ್ಧ: ಬಸವಣ್ಣನವರ ತತ್ವ, ಸಿದ್ಧಾಂತ ಮತ್ತು ಸಾಮಾಜಿಕ ಕೊಡುಗೆಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಮಹಾಸಭಾ ಸಂಪೂರ್ಣ ಬದ್ಧವಾಗಿದ್ದು, ಅಂತಹ ವಿಕೃತ ಮನೋಭಾವದವರ ವಿರುದ್ಧ ಶಾಂತಿಯುತ ಹಾಗೂ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು.
ಬಸವಣ್ಣನವರ ಕುರಿತು ಮಾತನಾಡುವವರು ಅವರ ಐತಿಹಾಸಿಕ ಹಿನ್ನೆಲೆ, ವಚನಗಳ ಆಶಯ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಅಧ್ಯಯನ ಮಾಡಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಶಂಕರ್ ಬಿದರಿ ಆಗ್ರಹಿಸಿದ್ದಾರೆ.




