Home ದಾವಣಗೆರೆ 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಿಸಲು ಕಾಂಗ್ರೆಸ್ ಕಾರ್ಯಕರ್ತರೇ ಟೊಂಕಕಟ್ಟಿ ನಿಲ್ಲಿ: ಮಾಜಿ ಸಿಎಂ ಸಿದ್ದರಾಮಯ್ಯ!
ದಾವಣಗೆರೆನವದೆಹಲಿಬೆಂಗಳೂರು

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಿಸಲು ಕಾಂಗ್ರೆಸ್ ಕಾರ್ಯಕರ್ತರೇ ಟೊಂಕಕಟ್ಟಿ ನಿಲ್ಲಿ: ಮಾಜಿ ಸಿಎಂ ಸಿದ್ದರಾಮಯ್ಯ!

Share
ಸಿದ್ದರಾಮಯ್ಯ
Share

ಚಿಕ್ಕಮಗಳೂರು: ದೇಶದ ಬಡವರು, ರೈತರು, ಕಾರ್ಮಿಕರು, ಮಹಿಳೆಯರು, ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ಏಕೈಕ ಪಕ್ಷ ಕಾಂಗ್ರೆಸ್. ಬಿಜೆಪಿ ಶ್ರೀಮಂತರು ಮತ್ತು ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕನ್ನು ಸುಧಾರಿಸುವ ಕೆಲಸ ಮಾಡುತ್ತಿದೆ. ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯನ್ನು ನಿವಾರಿಸಿ, ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದೇ ನಮ್ಮ ಪಕ್ಷದ ಮೂಲ ಸಿದ್ಧಾಂತವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮಂಜೇಗೌಡ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

2029ರಲ್ಲಿ ರಾಹುಲ್ ಗಾಂಧಿಯವರು ಪ್ರಧಾನಮಂತ್ರಿಯಾಗುವಂತೆ ಮಾಡುವುದು ಕಾಂಗ್ರೆಸ್ ಕಾರ್ಯಕರ್ತರ ಗುರಿಯಾಗಬೇಕು. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ದೇಶದ ನಾಯಕತ್ವ ವಹಿಸಲು ರಾಹುಲ್ ಗಾಂಧಿಯವರಿದ್ದಾರೆ. ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಲು ಪ್ರತಿಯೊಬ್ಬ ಕಾರ್ಯಕರ್ತರೂ ಟೊಂಕಕಟ್ಟಿ ನಿಲ್ಲಬೇಕು ಎಂದು ಕರೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆಗೂ ಇಂದಿರಾ ಗಾಂಧಿಯವರಿಗೂ ಅವಿನಾಭಾವ ಸಂಬಂಧವಿದೆ. ಈ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಅವರನ್ನು ಚಿಕ್ಕಮಗಳೂರಿನ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. 1978ರಲ್ಲಿ ಮೋಟಮ್ಮನವರ ವಿವಾಹ ಸಮಾರಂಭದಲ್ಲಿಯೂ ಇಂದಿರಾ ಗಾಂಧಿಯವರು ಭಾಗವಹಿಸಿದ್ದರು. ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು, 20 ಅಂಶಗಳ ಕಾರ್ಯಕ್ರಮ ಹಾಗೂ ‘ಗರೀಬಿ ಹಟಾವೋ’ ಘೋಷಣೆಯ ಮೂಲಕ ಬಡತನ ನಿರ್ಮೂಲನೆಗೆ ಆದ್ಯತೆ ನೀಡಿದ್ದರು. ಅವರ ಜನ್ಮದಿನದ ಸಂದರ್ಭದಲ್ಲಿ ಗೌರವಪೂರ್ವಕ ನಮನಗಳನ್ನು ಸಲ್ಲಿಸಿದೆ ಎಂದರು.

ಆಧುನಿಕ ಭಾರತದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರು. ಮಹಾತ್ಮ ಗಾಂಧಿ, ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅನೇಕ ಮಹನೀಯರ ನೇತೃತ್ವದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮಹತ್ವದ ಪಾತ್ರ ವಹಿಸಿದೆ. ಆದರೆ ಆರ್‌ಎಸ್‌ಎಸ್, ಜನಸಂಘ ಹಾಗೂ ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಲ್ಲ. ದೇಶದ ಸ್ವಾತಂತ್ರ್ಯ ಮತ್ತು ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ನೆಹರು ಕುಟುಂಬವನ್ನು ಕಂಡರೆ ಬಿಜೆಪಿಯವರಿಗೆ ಹೊಟ್ಟೆಕಿಚ್ಚು ಎಂದು ಕಿಡಿಕಾರಿದರು. 

ಕಾಂಗ್ರೆಸ್ ಎಲ್ಲ ಜಾತಿ, ಧರ್ಮ ಮತ್ತು ಸಮುದಾಯಗಳನ್ನು ಒಗ್ಗೂಡಿಸುವ ಪಕ್ಷವಾಗಿದೆ. ಬಿಜೆಪಿ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದರೆ, ಕಾಂಗ್ರೆಸ್ ಪ್ರೀತಿ, ವಿಶ್ವಾಸ ಮತ್ತು ಸಹೋದರತ್ವವನ್ನು ಬೆಳೆಸುತ್ತದೆ. ಪ್ರತಿಯೊಬ್ಬ ಕಾರ್ಯಕರ್ತರೂ ಕಾಂಗ್ರೆಸ್ ಸಿದ್ಧಾಂತವನ್ನು ಅರಿತು ಜನರಿಗೆ ತಲುಪಿಸಬೇಕು ಎಂದರು.

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಕರ್ನಾಟಕದಲ್ಲಿ ಸುಮಾರು ಒಂದು ಕೋಟಿ ಮತದಾರರ ಹೆಸರುಗಳು ಕಡಿಮೆಯಾಗಿವೆ. ಮೃತರ ಹೆಸರುಗಳನ್ನು ತೆಗೆದುಹಾಕುವುದಕ್ಕೆ ಆಕ್ಷೇಪವಿಲ್ಲ. ಆದರೆ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ರಾಹುಲ್ ಗಾಂಧಿಯವರು ‘ವೋಟ್ ಚೋರಿ’ ವಿರುದ್ಧ ದೇಶಾದ್ಯಂತ ಹೋರಾಟ ನಡೆಸುತ್ತಿದ್ದಾರೆ. ಪ್ರತಿಯೊಬ್ಬ ಅರ್ಹ ಮತದಾರನ ಮತದಾನದ ಹಕ್ಕನ್ನು ರಕ್ಷಿಸಲು ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು. 

ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮಾರು ಏಳು ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅಂಶುಮಂತ್ ಅವರು ಪಕ್ಷ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಅವಧಿಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಗೆಲುವಿಗೆ ಕಾರಣರಾದ ಜಿಲ್ಲೆಯ ಜನತೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ನೂತನ ಅಧ್ಯಕ್ಷರಾದ ಮಂಜೇಗೌಡ ಅವರು ಗ್ರಾಮ ಪಂಚಾಯಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಬೇಕು. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಎಲ್ಲ ಕಾರ್ಯಕರ್ತರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಕಾರ್ಯಕರ್ತರಿಗೆ ಅಧಿಕಾರದೊಂದಿಗೆ ಜನಸೇವೆ ಮಾಡುವ ಅವಕಾಶವನ್ನು ಕಲ್ಪಿಸುತ್ತವೆ ಎಂದರು. 

ಚಿಕ್ಕಮಗಳೂರು ಶಾಸಕ ತಮ್ಮಯ್ಯ ಅವರು 2028ರ ವಿಧಾನಸಭಾ ಚುನಾವಣೆಯಲ್ಲಿಯೂ ಗೆಲುವು ಸಾಧಿಸಬೇಕು. ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಗೆಲುವನ್ನು ಪುನರಾವರ್ತಿಸಬೇಕು. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ. ಆದರೆ ಜನರ ವಿಶ್ವಾಸ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಒಗ್ಗಟ್ಟಿನ ಹೋರಾಟದಿಂದ ಅವರ ಕನಸನ್ನು ಹುಸಿಗೊಳಿಸಬೇಕು ಎಂದು ಹೇಳಿದರು.

ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮಂಜೇಗೌಡ ಅವರಿಗೆ ಅಭಿನಂದನೆಗಳು, ನಿರ್ಗಮಿತ ಅಧ್ಯಕ್ಷರಾದ ಅಂಶುಮಂತ್ ಅವರ ಸೇವೆಗೆ ಧನ್ಯವಾದಗಳು. ಮುಂಬರುವ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹೇಳಿದರು.

Share

Recent Posts

Recent Comments

No comments to show.
Related Articles