
ದಾವಣಗೆರೆ: ಭದ್ರಾ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರ ಹಿತಾಸಕ್ತಿ ಕಾಪಾಡುವ ಹಾಗೂ ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಯಿತು.
ಸಭೆಯಲ್ಲಿ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್, ದಾವಣಗೆರೆ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಹಾಗೂ ಜಿಲ್ಲೆಯ ಇತರ ಶಾಸಕರು ಭಾಗವಹಿಸಿ, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಎದುರಿಸುತ್ತಿರುವ ನೀರಾವರಿ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.
ಭದ್ರಾ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಮುಂಗಾರು ಹಂಗಾಮಿನಲ್ಲಿ ಬೆಳೆ ಬೆಳೆಯಲು ಸಮರ್ಪಕ ನೀರು ಲಭ್ಯವಾಗದ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ರೈತ ಕುಟುಂಬಗಳ ಜೀವನೋಪಾಯ ಹಾಗೂ ಆರ್ಥಿಕ ಸ್ಥಿತಿಗತಿಗಳ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಿ, ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನಿರಂತರವಾಗಿ ನೀರು ಹರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಚಿವರು ಸಭೆಯಲ್ಲಿ ಒತ್ತಾಯಿಸಿದರು.
ವಿಶೇಷವಾಗಿ, ಭದ್ರಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ 10 ದಿನಗಳಲ್ಲಿ ಒಟ್ಟು ಒಂದು ಟಿಎಂಸಿ ನೀರು ಹರಿಸುವ ನವೆಂಬರ್ 16ರ ಹಿಂದಿನ ಆದೇಶಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ, ರೈತರ ಆತಂಕ ಹಾಗೂ ಮುಂದಿನ ಹಂಗಾಮಿನ ನೀರಿನ ಅಗತ್ಯವನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
ರೈತರ ಹಿತದೃಷ್ಟಿಯಿಂದ ಹಿಂದಿನ ಆದೇಶವನ್ನು ಮರುಪರಿಶೀಲಿಸಿ, ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಸುವುದನ್ನು ಸ್ಥಗಿತಗೊಳಿಸುವಂತೆ ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಕರೆದು, ಬೇಸಿಗೆ ಹಂಗಾಮಿಗೆ ನಿರಂತರ ನೀರು ಹರಿಸುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಸುವುದನ್ನು ಸ್ಥಗಿತಗೊಳಿಸಿ, ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಜಲಾಶಯದ ನೀರಿನ ಲಭ್ಯತೆ ಹಾಗೂ ರೈತರ ಅಗತ್ಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯ ಚರ್ಚೆಯ ಫಲವಾಗಿ, ಜಲಸಂಪನ್ಮೂಲ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ನವೆಂಬರ್ 16ರ ಹಿಂದಿನ ಆದೇಶವನ್ನು ಭಾಗಶಃ ಮಾರ್ಪಡಿಸಿ, ಭದ್ರಾ ಎಡದಂಡೆ ಕಾಲುವೆಗೆ ಮಾತ್ರ 380 ಕ್ಯೂಸೆಕ್ ನೀರನ್ನು 10 ದಿನಗಳವರೆಗೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅಧಿಕೃತ ಸೂಚನೆ ನೀಡಿದ್ದಾರೆ.
ಅಲ್ಲದೆ, ಮುಂಬರುವ ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ನೀರಾವರಿ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಡಿಸೆಂಬರ್ ಮೊದಲ ವಾರದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣದ ಆಧಾರದಲ್ಲಿ ಮುಂದಿನ ನೀರು ಹಂಚಿಕೆ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ದೇಶಿಸಲಾಗಿದೆ.
ರೈತರ ಜೀವನೋಪಾಯ, ಕೃಷಿ ಚಟುವಟಿಕೆಗಳು ಹಾಗೂ ಆರ್ಥಿಕ ಹಿತಾಸಕ್ತಿಗಳ ರಕ್ಷಣೆಗೆ ಆದ್ಯತೆ ನೀಡಲಾಗಿದ್ದು, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಂಬರುವ ಹಂಗಾಮಿನಲ್ಲಿ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಹಾಗೂ ಪರಿಷ್ಕೃತ ನೀರು ಹರಿಸುವ ಆದೇಶದ ಮಾಹಿತಿಯನ್ನು ದಾವಣಗೆರೆ ಜಿಲ್ಲೆಯ ಸಮಸ್ತ ರೈತ ಬಾಂಧವರ ಗಮನಕ್ಕೆ ತರಲಾಗಿದೆ.
- Bhadra Command Area
- Bhadra Dam water order
- Davangere News
- Dr. Prabha Mallikarjun
- Irrigation Consultative Committee
- Karnataka government agriculture news
- SS Mallikarjun
- ಎಸ್. ಎಸ್. ಮಲ್ಲಿಕಾರ್ಜುನ್
- ಜಲಸಂಪನ್ಮೂಲ ಇಲಾಖೆ
- ಡಾ. ಪ್ರಭಾ ಮಲ್ಲಿಕಾರ್ಜುನ್
- ದಾವಣಗೆರೆ ಸುದ್ದಿ
- ನೀರಾವರಿ ಸಲಹಾ ಸಮಿತಿ
- ಬೇಸಿಗೆ ಹಂಗಾಮು ನೀರು
- ಭದ್ರಾ ಕಾಲುವೆ ನೀರು
- ಭದ್ರಾ ಜಲಾಶಯ
- ರೈತರ ಹಿತರಕ್ಷಣೆ.




