
ದಾವಣಗೆರೆ: ಜಿಲ್ಲಾಡಳಿತ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರನ್ನು ಭೇಟಿ ಮಾಡಿದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾದ ಮನವಿಗಳನ್ನು ಸ್ವೀಕರಿಸಿ, ಅಹವಾಲುಗಳನ್ನು ಆಲಿಸಿದರು.
ಹೊಸಜೋಗ, ನಂದಿತಾವರೆ, ಗೋಗುದ್ದು, ಹರಪನಹಳ್ಳಿ, ಜಗಳೂರು, ಚನ್ನಗಿರಿ, ಮಾಯಕೊಂಡ ಸೇರಿದಂತೆ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ರಸ್ತೆ, ಚರಂಡಿ, ಸ್ಮಶಾನ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಹಾಗೂ ಉದ್ಯೋಗಾವಕಾಶ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ಹರಿಹರ ತಾಲ್ಲೂಕು ಮಲೇಬೆನ್ನೂರು ಹೋಬಳಿ ನಂದಿತಾವರೆ ಗ್ರಾಮದ ಭಾಸ್ಕರ್ ರಾವ್ ಕ್ಯಾಂಪ್ನ ಎರಡು ಕೇರಿಗಳಲ್ಲಿ ಮಣ್ಣಿನ ರಸ್ತೆಗಳಿದ್ದು, ಮಳೆಗಾಲದಲ್ಲಿ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಶ್ರೀ ದುರ್ಗಮ್ಮ ದೇವಸ್ಥಾನದಿಂದ ರಾಮಕೃಷ್ಣ ಅವರ ಮನೆಯವರೆಗೆ 250 ಮೀಟರ್ ಹಾಗೂ ಎಸ್.ಎಚ್. ರಸ್ತೆಯಿಂದ ಡಿ. ಕೃಷ್ಣಮೂರ್ತಿ ಅವರ ಮನೆಯವರೆಗೆ 200 ಮೀಟರ್ ಸಿಸಿ ರಸ್ತೆ ನಿರ್ಮಿಸಲು ಅನುದಾನ ಒದಗಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.
ನಂದಿತಾವರೆ ಗ್ರಾಮದ ಎರಡು ಎಕರೆ ವಿಸ್ತೀರ್ಣದ ಸ್ಮಶಾನ ಜಾಗದ ಅಭಿವೃದ್ಧಿ ಸೇರಿದಂತೆ ಒಟ್ಟು 450 ಮೀಟರ್ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಸಂಸದರ ವಿಶೇಷ ಅನುದಾನದಡಿ ಮಂಜೂರಾತಿ ನೀಡುವಂತೆ ಕೋರಿದರು.
ಹೊಸ ಜೋಗ ಜನವಸತಿ ಪ್ರದೇಶದಲ್ಲಿ 80ಕ್ಕೂ ಹೆಚ್ಚು ಕುಟುಂಬಗಳಿದ್ದು, 300ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ. ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆನೀರು ಹಾಗೂ ಕೊಳಚೆ ನೀರು ರಸ್ತೆಯಲ್ಲಿಯೇ ನಿಲ್ಲುತ್ತಿದೆ. ಇದರಿಂದ ಸಂಚಾರಕ್ಕೆ ಅಡಚಣೆಯಾಗುವುದರ ಜೊತೆಗೆ ಸೊಳ್ಳೆಗಳ ಹಾವಳಿ ಹಾಗೂ ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಆತಂಕ ಎದುರಾಗಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು.
ಕೊಳಚೆ ನೀರು ಸರಾಗವಾಗಿ ಹರಿದುಹೋಗಲು ಅನುಕೂಲವಾಗುವಂತೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ವೈಜ್ಞಾನಿಕವಾಗಿ ಸಿಮೆಂಟ್ ಚರಂಡಿ ನಿರ್ಮಿಸಲು ಅನುದಾನ ಕಲ್ಪಿಸುವಂತೆ ಮನವಿ ಸಲ್ಲಿಸಿದರು.
ಸಾರ್ವಜನಿಕರ ಮನವಿಗಳನ್ನು ಪರಿಶೀಲಿಸಿದ ಸಂಸದರು, ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.




