
ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಭಾರೀ ಹಿನ್ನಡೆ ಉಂಟುಮಾಡಿದೆ. ಜೊತೆಗೆ ಶಾಸಕರಿಗೆ ಬಿಗ್ ಶಾಕ್ ಕೊಟ್ಟಿದೆ.
ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್, ಮುಂಬರುವ 2 ವಾರಗಳಲ್ಲಿ ಶರಣಾಗುವಂತೆ ಮಹತ್ವದ ಸೂಚನೆ ನೀಡಿದೆ. ಇದರೊಂದಿಗೆ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವೂ ಅನರ್ಹಗೊಂಡಿದೆ.
ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದ್ದು, ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಸಿಬಿಐ (CBI) ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದೆ.
ಪ್ರಕರಣದ ಹಿನ್ನೆಲೆ: 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿ ಜಿಮ್ ಮಾಲೀಕ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಸಿಬಿಐ ತನಿಖೆಯಿಂದ ಬಯಲಾಗಿತ್ತು.
ವಿಶೇಷ ನ್ಯಾಯಾಲಯದ ತೀರ್ಪು ಮತ್ತು ಹೈಕೋರ್ಟ್ ಜಾಮೀನು: 2026ರ ಏಪ್ರಿಲ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಇತರ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ವಿನಯ್ ಕುಲಕರ್ಣಿಗೆ ಜುಲೈ 31ರಂದು ಹೈಕೋರ್ಟ್ ವಿಭಾಗೀಯ ಪೀಠವು ಷರತ್ತುಬದ್ಧ ಜಾಮೀನು ಹಾಗೂ ಶಿಕ್ಷೆಗೆ ತಡೆ ನೀಡಿತ್ತು.
ಸುಪ್ರೀಂಕೋರ್ಟ್ ಆದೇಶ: ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಮೃತರ ಕುಟುಂಬಸ್ಥರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅಕ್ಟೋಬರ್ 27ರಂದು ವಾದ-ಪ್ರತಿವಾದ ಆಲಿಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಜಾಮೀನು ರದ್ದುಪಡಿಸಿರುವ ನ್ಯಾಯಾಲಯ, 2 ವಾರಗಳಲ್ಲಿ ಶರಣಾಗಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.




