SUDDIKSHANA KANNADA NEWS/ DAVANAGERE/ DATE:06-12-2023
ಬೆಂಗಳೂರು: ಅರ್ಜುನನ ಹತ್ಯೆಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ. ಅರಣ್ಯ ಇಲಾಖೆ ಕಾಡಾನೆ ಸೆರೆ ಹಿಡಿಯುವಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿ ಕಾರ್ಯಾಚರಣೆಗೆ ಧುಮುಕಿದ್ದೇ ಈ ಸಾವಿಗೆ ಕಾರಣ ಎಂದು ಬಿಜೆಪಿ ಆರೋಪಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿಯು, 64 ವರ್ಷದ ಅರ್ಜುನನ ಜತೆಗೆ ಸದಾ ನಿಲ್ಲುತ್ತಿದ್ದ ಭೀಮ ಇಲ್ಲದ ಸಮಯದಲ್ಲಿ, ಅರ್ಜುನನ್ನು ಬಲಾಢ್ಯ ಒಂಟಿ ಸಲಗವನ್ನು ಹಿಡಿಯಲು ಬಳಿಸಿಕೊಂಡಿದ್ದು, ನುರಿತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇಲ್ಲದೆ ಇರುವುದೇ ಈ ಎಲ್ಲಾ ಅನಾಹುತಗಳಿಗೂ ಕಾರಣ ಎಂದು ದೂರಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದಲ್ಲಿ ಇದ್ದಂತೆ ಕಾಣುತ್ತಿಲ್ಲ. ಇಲಾಖೆಯ ಅಸಮರ್ಪಕ ನಿರ್ವಹಣೆಯೇ ಇಂತಹ ಘಟನೆಗೆ ಕಾರಣವಾಗಿದ್ದು, ಇದರ ಹೊಣೆಯನ್ನು ಸರ್ಕಾರ ಮತ್ತು ಸಚಿವರೇ ಹೊರಬೇಕು..! ಎಂದು ಒತ್ತಾಯಿಸಿದೆ.
ಅರ್ಜುನನಿಗೆ ಸ್ಮಾರಕ:
8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವೀಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ. ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಾಡಲಾಗುವುದು ಹಾಗೂ ಹೆಗ್ಗಡದೇವನಕೋಟೆಯಲ್ಲಿಯೂ ಸ್ಮಾರಕವಾಗಬೇಕೆಂದು ಸೂಚಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅರ್ಜುನನ ಸಾವಿಗೆ ಕಾರಣರಾದವರ ವಿರುದ್ದ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ:
ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಮೇಲೆ ಜನರ ವಿಶ್ವಾಸ:
ತೆಲಂಗಾಣ ರಾಜ್ಯದಲ್ಲಿ ಹೈ ಕಮಾಂಡ್ ಅವರು ಅಭಿಪ್ರಾಯ ಸಂಗ್ರಹಿಸಿ ಬಹುಮತವಿದೆ ಎಂದು ರೇಮಂತ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದಾರೆ. ಅಲ್ಲಿ 6 ಗ್ಯಾರಂಟಿ ನೀಡಿದ್ದು ಜನ ಕಾಂಗ್ರೆಸ್ ವರಿಷ್ಠರ ಮೇಲೆ ನಂಬಿಕೆ ವಿಶ್ವಾಸವಿಟ್ಟು ಜನ ಮತ ಹಾಕಿದ್ದಾರೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಅರಣ್ಯ ಇಲಾಖೆ ಎಚ್ಚರ ವಹಿಸಬೇಕು: ಹೆಚ್ ಡಿಕೆ
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆಗಳ ಸೆರೆಗೆ ನಡೆಸಿದ ಕಾರ್ಯಾಚರಣೆ ವೇಳೆ ಒಂಟಿ ಸಲಗದ ದಾಳಿಗೆ ತುತ್ತಾಗಿ ಸಾಕಾನೆ ಅರ್ಜುನ ವೀರಮರಣ ಹೊಂದಿದ ಘಟನೆ ತಿಳಿದು ಬಹಳ ನೋವುಂಟಾಯಿತು. ದಸರಾ ಅಂಬಾರಿಯನ್ನು ಹೊತ್ತು ಸಾಗಿದ್ದ ಅರ್ಜುನ ಇನ್ನು ನೆನಪಷ್ಟೇ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸ್ಥಳಾಂತರ ಕಾರ್ಯಾಚರಣೆ ವೇಳೆ ಸಾಕಾನೆಗಳು-ಕಾಡಾನೆಗಳ ನಡುವಿನ ಭೀಕರ ಕಾಳಗದ ವೇಳೆ ಇತರೆ ಸಾಕಾನೆಗಳು ಪಲಾಯನ ಮಾಡಿದರೆ, ಅರ್ಜುನ ಮಾತ್ರ ಒಂಟಿ ಸಲಗದ ಜತೆ ವಿರೋಚಿತವಾಗಿ ಸೆಣಸಾಡಿತ್ತು. ಇಂಥ ವಿರೋಚಿತ ಆನೆ
ಸಾವನ್ನಪ್ಪಿರುವುದು ಅತ್ಯಂತ ದುಃಖದ ಸಂಗತಿ. ಕಾಡಾನೆಗಳನ್ನು ಸೆರೆ ಹಿಡಿಯುವಾಗ ತಮ್ಮ ಪ್ರಾಣ ರಕ್ಷಣೆಯ ಜತೆಗೆ ವನ್ಯಮೃಗಗಳ ಜೀವಕ್ಕೆ ಹಾನಿ ಆಗದಂತೆ ಅರಣ್ಯ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಲಿ. ಅರ್ಜುನನ ಆತ್ಮಕ್ಕೆ ಚಿರಶಾಂತಿ ಸಿಗಲಿ.
ಆ ತಾಯಿ ಚಾಮುಂಡೇಶ್ವರಿ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.