SUDDIKSHANA KANNADA NEWS/ DAVANAGERE/ DATE:20-12-2023
ಬೆಂಗಳೂರು: ಕೋವಿಡ್ ಉಪತಳಿ ಜೆಎನ್1 ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವರ್ಷಾಚರಣೆಗೆ ಯಾವುದೇ ನಿರ್ಬಂಧ ಹೇರದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇನ್ನು ಕ್ರಿಸ್ಮಸ್ ಆಚರಣೆಗೂ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ವಿಷಯ ಸ್ಪಷ್ಟಪಡಿಸಿದ್ದು, ಸದ್ಯಕ್ಕೆ ಯಾವುದೇ ರೀತಿಯ ನಿರ್ಬಂಧವನ್ನು ಹೊಸ ವರ್ಷಾಚರಣೆಗೆ ಹೇರದಿರಲು ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯರ ಜೊತೆ ಚರ್ಚೆ ನಡೆಸಿ, ಅಧಿಕಾರಿಗಳ ಜೊತೆ ಸಭೆ ನಡೆಸಿ ಅಂತಿಮ ನಿರ್ಧಾರ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಮಾಸ್ಕ್ ಹಾಕಿಕೊಳ್ಳುವುದು ಎಲ್ಲರಿಗೂ ಒಳ್ಳೆಯದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಮುಖಗವಸು ಧರಿಸುವುದು ಆರೋಗ್ಯ ದೃಷ್ಟಿಯಿಂದ ಉತ್ತಮ. ಯಾವುದೇ ರೀತಿಯಲ್ಲಿ ಹೆದರುವಂಥ ಸ್ಥಿತಿ ಇಲ್ಲ. ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕೊರೊನಾಗೆ ರಾಜ್ಯದಲ್ಲಿ ಒಬ್ಬರು ಮೃತಪಟ್ಟಿದ್ದು, 64 ವರ್ಷದ ವ್ಯಕ್ತಿಯಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ಹಲವು ರೀತಿಯ ಕಾಯಿಲೆಗಳು ಇತ್ತು. ನ್ಯುಮೋನಿಯಾದಿಂದ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಡಿಸೆಂಬರ್ 15 ರಂದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಜೆ ಎನ್.1 ಅನ್ನೋ ಬಗ್ಗೆ ಇನ್ನು ವರದಿ ಬಂದಿಲ್ಲ. ವರದಿ ಬಂದ ಬಳಿಕ ಸರಿಯಾಗಿ ಗೊತ್ತಾಗಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು. ನೆರೆ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಕೋವಿಡ್ನ ರೂಪಾಂತರ ತಳಿಯಾಗಿರುವ ಜೆಎನ್-1 ವರದಿಯಾಗಿದ್ದು ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಲು ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ಕಿಡ್ನಿ, ಹೃದಯ, ಲಿವರ್ ಸಮಸ್ಯೆಯಿಂದ ಬಳಲುತ್ತಿರುವವರು, ಗರ್ಭೀಣಿಯರು, ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳಿರುವವರು ತಕ್ಷಣವೇ ವೈದ್ಯರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ, ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಂತೆ ಎಚ್ಚರ ವಹಿಸಿ ಎಂದರು.
ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿರುವುದು ಸೂಕ್ತವಾಗಿದ್ದು ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸ್ವಯಂ ನಿಯಂತ್ರಣ ಹೊಂದುವ ಮೂಲಕ ಎಚ್ಚರಿಕೆ ವಹಿಸಬೇಕು. ಉತ್ತಮ ವೈಯಕ್ತಿಕ ಸ್ವಚ್ಚತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದನ್ನು ಮಾಡಬೇಕು ಎಂದರು.