SUDDIKSHANA KANNADA NEWS/ DAVANAGERE/ DATE:05-01-2025
ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತುಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಶೇಕಡಾ 60ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಆರೋಪಿಸಿದ್ದಾರೆ ಎಂಬ ಟೀಕೆಗೆ ಈ ಉತ್ತರ ನೀಡಿದರು.
ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಜಿ.ಪಂ., ತಾ.ಪಂ. ಚುನಾವಣೆಗೆ ಸಿದ್ಧ
ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದು ತಿಳಿಸಿದರು.
ಒಳಮೀಸಲಾತಿಗೆ ಸರ್ಕಾರ ಬದ್ಧ:
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.
ರಾಜಕೀಯ ಚರ್ಚೆ ನಡೆದಿಲ್ಲ:
ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.
ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.
ಮಾರ್ಚ್ ನಲ್ಲಿ ಬಜೆಟ್ ಮಂಡನೆ:
ಈ ಬಾರಿಯ ಬಜೆಟ್ ನ್ನು ಮಾರ್ಚ್ ನಲ್ಲಿ ಮಂಡಿ. ಆಯವ್ಯಯ ಪೂರ್ವಭಾವಿ ಚರ್ಚೆ ಪ್ರಾರಂಭವಾದ ನಂತರ ದಿನಾಂಕವನ್ನು ತಿಳಿಸಲಾಗುವುದು ಎಂದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಕಾಂಗ್ರೆಸ್ ಮುಖಂಡರು ಮತ್ತಿತರರು ಹಾಜರಿದ್ದರು.