Home ದಾವಣಗೆರೆ ವಕ್ಫ್ ಬೋರ್ಡ್‌ನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಎಸ್.ಎಸ್. ಮಲ್ಲಿಕಾರ್ಜುನ್ ಗಂಭೀರ ಆರೋಪ!
ದಾವಣಗೆರೆಕ್ರೈಂ ನ್ಯೂಸ್ಬೆಂಗಳೂರು

ವಕ್ಫ್ ಬೋರ್ಡ್‌ನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಎಸ್.ಎಸ್. ಮಲ್ಲಿಕಾರ್ಜುನ್ ಗಂಭೀರ ಆರೋಪ!

Share
ಎಸ್.ಎಸ್. ಮಲ್ಲಿಕಾರ್ಜುನ್
Share

ದಾವಣಗೆರೆ: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದ್ದು, ವಕ್ಫ್‌ ಬೋರ್ಡ್‌ನಲ್ಲಿ ಮಾಜಿ ಸಚಿವ ಬಿ. ಝಡ್. ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಲಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್  ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಸ್ವಪಕ್ಷದ ನಾಯಕನ ವಿರುದ್ಧವೇ ಮಲ್ಲಿಕಾರ್ಜುನ್ ನೇರ ವಾಗ್ದಾಳಿ ನಡೆಸಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಜಮೀರ್ ಅಹ್ಮದ್ ಮತ್ತು ಸಿರಾಜ್ ಅಹ್ಮದ್ ಸಂಚು ರೂಪಿಸಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ್, “ಇದು ಎಐ (AI) ಸೃಷ್ಟಿಸಿದ ನಕಲಿ ಆಡಿಯೋ ಅಲ್ಲ, ನೂರಕ್ಕೆ ನೂರು ಒರಿಜಿನಲ್ ಆಡಿಯೋ” ಎಂದು ಹೇಳುವ ಮೂಲಕ ಜಮೀರ್ ವಿರುದ್ಧ ಮತ್ತೊಂದು ಸುತ್ತಿನ ವಾಗ್ಯುದ್ಧಕ್ಕೆ ನಾಂದಿ ಹಾಡಿದ್ದಾರೆ.

ಬಿಜೆಪಿಗೆ ಸಿಕ್ಕ ಹೊಸ ಅಸ್ತ್ರ:

ಜಮೀರ್ ಅಹ್ಮದ್ ವಿರುದ್ಧ ಕಾಂಗ್ರೆಸ್ ಶಾಸಕರೇ ಗಂಭೀರ ಆರೋಪ ಮಾಡಿರುವುದು ಈಗ ಬಿಜೆಪಿಗೆ ದೊಡ್ಡ ರಾಜಕೀಯ ಅಸ್ತ್ರವಾಗಿ ಸಿಕ್ಕಂತಾಗಿದೆ. ಈ ಕುರಿತು ಜಂಟಿ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕರು, “ನಿಕಟಪೂರ್ವ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಸಿಎಂ ಡಿ. ಕೆ. ಶಿವಕುಮಾರ್ ಅವರು, ಲೂಟಿಕೋರ ಜಮೀರ್‌ ಅಹಮದ್‌ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಭ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಾರೋ ಅಥವಾ ತಕ್ಷಣವೇ ಸಂಪುಟದಿಂದ ದೂರವಿಟ್ಟು ತನಿಖೆ ನಡೆಸುತ್ತಾರೋ ಎಂಬುದನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು” ಎಂದು ಒತ್ತಾಯಿಸಿದೆ.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ಅವರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಮಾಜಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ಅಧಿಕೃತವಾಗಿ ದೂರು ಸಲ್ಲಿಕೆಯಾಗಿದೆ. ಮಾತ್ರವಲ್ಲ, ಜಮೀರ್ ಅಹ್ಮದ್ ಖಾನ್ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂದು ಆಗ್ರಹಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ಮಾಜಿ ಮೇಯರ್ ಕೆ. ಚಮನ್ ಸಾಬ್ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ನಿಯೋಜಿತ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರಿಗೆ ಪತ್ರ ಬರೆದು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಜಮೀರ್ ಅಹ್ಮದ್ ಖಾನ್ ಗೆ ಯಾವುದೇ ಕಾರಣಕ್ಕೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಬಾರದು. ಆಡಿಯೋ ವೈರಲ್ ಪ್ರಕರಣ ಇತ್ಯರ್ಥವಾಗುವವರೆಗೆ ಯಾವುದೇ ಸಚಿವ ಸ್ಥಾನಮಾನ ನೀಡಬಾರದು. ಸಮರ್ಥ್ ಶಾಮನೂರು ವಿರುದ್ಧ ಷಡ್ಯಂತ್ರ ರೂಪಿಸಿದ್ದೇ ಆದಲ್ಲಿ ಪಕ್ಷದಲ್ಲಿ ಇಂಥವರು ಇರಲೇಬಾರದು ಎಂದು ಆಗ್ರಹಿಸಿದ್ದರು.

ಈ ಬೆಳವಣಿಗೆಯು ಮುಂಬರುವ ದಿನಗಳಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಆಂತರಿಕ ಕಲ್ಲೋಲ ಸೃಷ್ಟಿಸುವ ಮುನ್ಸೂಚನೆ ನೀಡಿದೆ.

Share

Leave a comment

Leave a Reply

Your email address will not be published. Required fields are marked *