SUDDIKSHANA KANNADA NEWS/ DAVANAGERE/ DATE:19-08-2024
ಬೆಂಗಳೂರು: “ಭ್ರಷ್ಟ ಮುಖ್ಯಮಂತ್ರಿಗಳೇ ರಾಜೀನಾಮೆ ನೀಡಿ ತನಿಖೆ ಎದುರಿಸಿ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಗುಡುಗಿದ್ದಾರೆ.
ಬಡವರ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿಧಾನಸಭಾ ಹಾಗೂ ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಅಕ್ರಮಗಳಿಗೆ ದೊರೆತಿರುವ ಸಾಕ್ಷಿ ಪುರಾವೆಗಳ ಆಧಾರದ ಮೇಲೆ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸಿದರೂ ರಾಜ್ಯಪಾಲರ ವಿರುದ್ಧವೇ ಸಮರಕ್ಕೆ ಮುಂದಾಗಿ ಭಂಡತನ ಪ್ರದರ್ಶನ ಮಾಡುತ್ತಿರುವ ಸಿಎಂ ಹಾಗೂ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಿಎಂ ಡಿ. ವಿ. ಸದಾನಂದಗೌಡ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಅರವಿಂದ್ ಬೆಲ್ಲದ್, ಮಾಜಿ ಸಚಿವ ಜನಾರ್ದನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.