ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದು, ಪದಚ್ಯುತಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ.
ರಾಜ್ಯಪಾಲರು ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು, ರಾಷ್ಟ್ರಪತಿಗಳು ಕೂಡಲೇ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ.
ಇದು ರಾಜಕೀಯ ಪಿತೂರಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ರಾಜ್ಯದಲ್ಲಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ. ರಾಜ್ಯಪಾಲರು ಪಕ್ಷಪಾತ ನಡೆಸುತ್ತಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಷ್ಟ್ರಪತಿಗಳು ಕೂಡಲೇ ಅವರನ್ನು ಪದಚ್ಯುತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಈ ಕ್ರಮಕ್ಕೆ ಬಿಜೆಪಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ ರಾಜಭವನವು ಬಿಜೆಪಿಯ ಕಚೇರಿಯಾಗಿ ಮಾರ್ಪಟ್ಟಿದೆ. ಸಿಎಂ ವಿರುದ್ಧ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ಸಲ್ಲಿಸಿದಾಗ, ಮುಖ್ಯ ಕಾರ್ಯದರ್ಶಿ ರಾಜಭವನಕ್ಕೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸಿದ್ದಾರೆ. ಆದರೆ, ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ರಾಜ್ಯದ ಜನತೆ ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ರಾಜ್ಯಪಾಲರ ಕಚೇರಿ ಸರಿಯಾದ ಕ್ರಮ ಅನುಸರಿಸಿಲ್ಲ. ಕಾನೂನು ಕ್ರಮಕ್ಕೆ ಅನುಮತಿ ನೀಡುವ ಮೊದಲು ಸಮರ್ಥ ಸರ್ಕಾರಿ ಸಂಸ್ಥೆಯಿಂದ ಪ್ರಾಥಮಿಕ ತನಿಖೆಯಾಗಬೇಕು, ಆದರೆ ಈ ಪ್ರಕರಣದಲ್ಲಿ ಆ ವಿಧಾನವನ್ನು ಅನುಸರಿಸಲಾಗಿಲ್ಲ ಎಂದು ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಧಾನಮಂತ್ರಿಗಳ ಕಚೇರಿ ಮತ್ತು ಗೃಹ ಸಚಿವಾಲಯದಲ್ಲಿ ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.