
ಬೆಂಗಳೂರು: “ಸಿಇಒಗಳು, ಇಒಗಳು, ಪಿಡಿಒಗಳು ಹಾಗೂ ಇತರ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಶಾಸಕರು ಅಥವಾ ಸಚಿವರಿಂದ ಅನಗತ್ಯ ಒತ್ತಡ ಬಂದರೆ ಅದನ್ನು ಗೌಪ್ಯವಾಗಿ ಜಿಲ್ಲಾಧಿಕಾರಿ ಅಥವಾ ಸಿಇಒಗಳ ಮೂಲಕ ಸರ್ಕಾರಕ್ಕೆ ತಿಳಿಸಬಹುದು. ಅಧಿಕಾರಿಗಳು ಯಾರ ಭಯಕ್ಕೂ ಒಳಗಾಗದೆ ಕಾನೂನುಬದ್ಧವಾಗಿ ಕೆಲಸ ಮಾಡಬೇಕು. ಜಾತಿಗಿಂತ ನೀತಿ, ಪ್ರಾಮಾಣಿಕತೆ ಮತ್ತು ಕೆಲಸದ ಗುಣಮಟ್ಟಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ” ಎಂದು ಸಿಎಂ ಡಿ. ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಹಾಗೂ ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
“ಸಚಿವರು ಪ್ರತಿ ತಿಂಗಳು ಎರಡು ಬಾರಿ ತಾಲೂಕುಗಳಿಗೆ ಭೇಟಿ ನೀಡಬೇಕು. ಶಾಸಕರು ಹೋಬಳಿ ಮತ್ತು ಪಂಚಾಯಿತಿ ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಬೇಕು. ನಾನು ಸಹ ಪ್ರತಿ ಶನಿವಾರ ಒಂದೊಂದು ಪ್ರಜಾಸೇವಾ ಕೇಂದ್ರಕ್ಕೆ ಭೇಟಿ ನೀಡುತ್ತೇನೆ. ಜನರ ಅರ್ಜಿಗಳನ್ನು ಸ್ವೀಕರಿಸಿ ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಬೇಕು. ಅಧಿಕಾರಿಗಳ ಪ್ರತಿದಿನದ ಕಾರ್ಯಚಟುವಟಿಕೆಗಳೂ ಜನರಿಗೆ ತಿಳಿಯಬೇಕು” ಎಂದರು.
“ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರ್ಕಾರ 16 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂಪಾಯಿ, 6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಹಾಗೂ ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.
“ಇಷ್ಟು ಬೃಹತ್ ಮೊತ್ತದ ಅನುದಾನ ನೀಡಿರುವುದು ಗುತ್ತಿಗೆದಾರರ ಉದ್ದಾರಕ್ಕೆ, ಜೇಬು ತುಂಬಿಸೋಕಲ್ಲ. ಗ್ರಾಮೀಣ ಜನರ ಬದುಕು ಬದಲಾಯೊಸೋಕೆ ನೀಡಲಾಗುತ್ತಿದೆ. ಈ ಅನುದಾನದಲ್ಲಿ ಒಂದು ರೂಪಾಯಿಯೂ ದುರುಪಯೋಗವಾಗಬಾರದು. ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಡ್ಡಾಯ” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಲಕಾಲಕ್ಕೆ ಕಾಮಗಾರಿ ವಿಡಿಯೋ, ಫೋಟೋ ಕಳುಹಿಸಲು ಅಧಿಕಾರಿಗಳಿಗೆ ಸೂಚನೆ
“ಪ್ರತಿಯೊಂದು ಕಾಮಗಾರಿ ಆರಂಭಿಸುವ ಮೊದಲು ಸ್ಥಳದ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ತೆಗೆದು ಕಡತದಲ್ಲಿ ದಾಖಲಿಸಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕದ ಚಿತ್ರಗಳನ್ನೂ ಸಂಗ್ರಹಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ನಿರ್ದೇಶಾಂಕಗಳನ್ನು ದಾಖಲಿಸಬೇಕು. ಟೆಂಡರ್ ಪ್ರಕ್ರಿಯೆ ಇಲ್ಲದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್ ಬೋರ್ಡ್ ಮೂಲಕ ಪರಿಶೀಲಿಸಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಚಿತ್ರಗಳು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಬೇಕು. ಪ್ರತಿ ಪಂಚಾಯಿತಿ ಮತ್ತು ಜಿಲ್ಲಾಮಟ್ಟದಲ್ಲಿ ವಾಟ್ಸ್ ಆ್ಯಪ್ ಗುಂಪು ರಚಿಸಿ ಕಾಮಗಾರಿಗಳ ವಿವರಗಳನ್ನು ಹಂಚಿಕೊಳ್ಳಬೇಕು” ಎಂದರು.
“ರಸ್ತೆ ಚೆನ್ನಾಗಿದ್ದರೂ ಮತ್ತೆ ಅದೇ ರಸ್ತೆಗೆ ಹಣ ಖರ್ಚು ಮಾಡುವುದು, ಕಾಮಗಾರಿ ಮಾಡದೆ ಬಿಲ್ ಪಡೆಯುವುದು, ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಣ ದುರುಪಯೋಗ ಮಾಡುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಅಕ್ರಮಗಳಿಗೆ ಇನ್ನು ಅವಕಾಶವಿಲ್ಲ” ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು
15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ
“ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ರಸ್ತೆ ಮರು ಡಾಂಬರೀಕರಣ, ಜಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಪ್ರತಿ ಕಿಲೋಮೀಟರ್ ನ ಕಾಮಗಾರಿಯ ಸ್ವರೂಪಕ್ಕೆ ಅನುಗುಣವಾಗಿ 38 ರಿಂದ 70 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜು ಮಾಡಲಾಗಿದೆ. ಈಗಾಗಲೇ ಪ್ರಗತಿ ಪಥ ಯೋಜನೆಯಡಿ 5 ಸಾವಿರ ಕೋಟಿ ಅನುದಾನವನ್ನೂ ನೀಡಲಾಗಿದೆ” ಎಂದು ಹೇಳಿದರು.
“6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಚರಂಡಿ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಈ ಹಣ ಬಳಕೆಯಾಗಲಿದೆ. ಯಾವ ಪಂಚಾಯಿತಿಯಲ್ಲಿ ಯಾವ ಕಾಮಗಾರಿ ಅಗತ್ಯವಿದೆ ಎಂಬುದನ್ನು ಗುರುತಿಸಿ, ಜಿಲ್ಲಾಧಿಕಾರಿಗಳ ಅನುಮತಿ ಮೂಲಕ ಅನುದಾನ ಬಿಡುಗಡೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಲಾಗುತ್ತಿದ್ದು, ಇದೊಂದು ದಾಖಲೆ” ಎಂದು ಹೇಳಿದರು.
- 16 ಸಾವಿರ ಕೋಟಿ ಅನುದಾನ
- 16000 crore rural development fund
- Bengaluru News
- DK Shivakumar
- Karnataka government projects
- Karnataka rural development grants
- Mukhyamantri Grameena Raste Samparka Yojana
- ಗ್ರಾಮೀಣ ಅಭಿವೃದ್ಧಿ ಕರ್ನಾಟಕ
- ಡಿ. ಕೆ. ಶಿವಕುಮಾರ್
- ಡಿಜೆಕೆ ಶಿವಕುಮಾರ್ ಎಚ್ಚರಿಕೆ
- ಬೆಂಗಳೂರು ಸುದ್ದಿ
- ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ
- ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ




