ಬೆಂಗಳೂರು: ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಹತ್ವದ ಮಾಹಿತಿ ನೀಡಿದ್ದು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದಲ್ಲೇ ಮಹಜರ್ ನಡೆಸಿರುವುದಾಗಿ ತಿಳಿಸಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಅವರ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಿತೇಶ್ ಪಾಂಡೆ ನೀಡಿದ ಹೇಳಿಕೆಯ ಆಧಾರದ ಮೇಲೆ ಈ ತನಿಖೆ ಹಾಗೂ ಮಹಜರ್ ನಡೆಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ದೆಹಲಿಯಲ್ಲಿರುವ ಕುಮಾರಸ್ವಾಮಿ ಅವರ ಅಧಿಕೃತ ನಿವಾಸದಿಂದಲೇ ಪ್ರಜ್ವಲ್ ಪ್ರಸಾದ್ ಹಾಗೂ ವಿನೋದ್ ಶರ್ಮ ಅವರೊಂದಿಗೆ ಸೇರಿ ರಿತೇಶ್ ಪಾಂಡೆ ಈ ಸ್ಟಿಂಗ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದರು ಎಂಬುದು ತನಿಖೆಯಿಂದ ಬಹಿರಂಗಗೊಂಡಿದೆ. ಈ ಬೆಳವಣಿಗೆಯ ಬಳಿಕ ಪ್ರತಿಕ್ರಿಯೆ ನೀಡಿರುವ ಡಾ. ಯತೀಂದ್ರ ಸಿದ್ದರಾಮಯ್ಯ, ತಂದೆ ಸಿದ್ದರಾಮಯ್ಯರ ತೇಜೋವಧೆ ಮಾಡಲು ದೊಡ್ಡ ಮಟ್ಟದ ಷಡ್ಯಂತ್ರ ರೂಪಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ದೃಢಪಟ್ಟ ಷಡ್ಯಂತ್ರ: ಕುಮಾರಸ್ವಾಮಿ ಅವರ ದೆಹಲಿ ನಿವಾಸದಿಂದಲೇ ಸ್ಟಿಂಗ್ ವಿಡಿಯೋ ಅಪ್ಲೋಡ್ ಆಗಿರುವುದು ಸಾಕ್ಷ್ಯ ಸಮೇತ ಸಾಬೀತಾಗಿದ್ದು, ಇದರ ಹಿಂದೆ ಕುಮಾರಸ್ವಾಮಿ ಅವರ ನೇರ ಕೈವಾಡವಿದೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಯತೀಂದ್ರ ಆರೋಪಿಸಿದ್ದಾರೆ.
ಕಾನೂನು ಕ್ರಮಕ್ಕೆ ಆಗ್ರಹ: ತಂದೆಯವರ ತೇಜೋವಧೆ ಮಾಡುವ ದುರುದ್ದೇಶದಿಂದ ಈ ಸಂಚು ರೂಪಿಸಿರುವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಂಬಂಧಪಟ್ಟವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ಅಸಲಿ ಸೂತ್ರಧಾರಿಗಳ ಬಂಧನ: ಕೇವಲ ಅಪ್ಲೋಡ್ ಮಾಡಿದವರಷ್ಟೇ ಅಲ್ಲದೆ, ಈ ಸ್ಟಿಂಗ್ ಆಪರೇಷನ್ ಹಿಂದೆ ಇರುವ ನೈಜ ವ್ಯಕ್ತಿಗಳು ಯಾರು ಎಂಬುದು ಕೂಡ ಸಮಗ್ರ ತನಿಖೆಯಿಂದ ಹೊರಬರಬೇಕು ಮತ್ತು ಅವರ ಮೇಲೂ ಕಠಿಣ ಕ್ರಮವಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸತ್ಯ ಏನೆಂಬುದು ಜನರಿಗೆ ತಿಳಿಯಬೇಕು ಹಾಗೂ ಸತ್ಯವೇ ಗೆಲ್ಲಬೇಕು ಎನ್ನುವುದಷ್ಟೇ ತಮ್ಮ ಏಕೈಕ ಉದ್ದೇಶ ಎಂದು ತಿಳಿಸಿರುವ ಯತೀಂದ್ರ ಸಿದ್ದರಾಮಯ್ಯ, ತಪ್ಪಿತಸ್ಥರು ಯಾರೇ ಆಗಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.





Leave a comment