SUDDIKSHANA KANNADA NEWS/ DAVANAGERE/ DATE-01-05-2025
ಬೆಂಗಳೂರು: ಕೇವಲ ಘೋಷಣೆ ಮಾಡಿದರೆ ಸಾಲದು, ಅದನ್ನು ಜಾರಿಗೆ ತರಬೇಕು. 73-74 ರ ತಿದ್ದುಪಡಿಗಳನ್ನು ಬಿಜೆಪಿ ವಿರೋಧಿಸಿತ್ತು. ಇತಿಹಾಸ ನೋಡಿದರೆ ಬಿಜೆಪಿ ಸಾಮಾಜಿಕ ನ್ಯಾಯದ ಪರ ಎಂದಿಗೂ ಇಲ್ಲ. ಕೂಡಲೇ ಯಾವ ದಿನಾಂಕದಿಂದ ಜನಗಣತಿ, ಜಾರಿ ಗಣತಿ ಮಾಡುತ್ತಾರೆ ಎಂದು ತಿಳಿಸಬೇಕು. ಜಾತಿ ಗಣತಿ ಮಾಡುವಾಗ ಸಾಮಾಜಿಕ ಆರ್ಥಿಕ ಸಮೀಕ್ಷೆ ಕೂಡ ಆಗಬೇಕು. ಇಲ್ಲಿಯವರೆಗೂ ಇದನ್ನು ವಿರೋಧಿಸುತ್ತಿದ್ದವರು ಈಗ ಸಮೀಕ್ಷೆ ನಡೆಸುವ ಘೋಷಣೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಜಾತಿ ಗಣತಿ ಹಾಗೂ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಾಡಿ ಹೊಗಳಿದ್ದು, ರಾಜ್ಯ ಸರ್ಕಾರದ ಸಮೀಕ್ಷೆಗೆ ಯಾವುದೇ ಪಾವಿತ್ರ್ಯತೆ ಇಲ್ಲ ಏನು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದಾಗ ಜಾತಿ ಗಣತಿ ವರದಿ ಪಡೆಯಲು ದಿನಾಂಕ ನಿಗದಿ ಮಾಡಿದಾಗ ಅವರನ್ನು ಅಮಾನತು
ಮಾಡುವುದಾಗಿ ಹೆದರಿಸಿ ವರದಿಯನ್ನು ಪಡೆಯಲಿಲ್ಲ ಎಂದರು.
ಸಮೀಕ್ಷೆಯ ಬಗ್ಗೆ ಈ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆಯೇ ಎಂಬ ಪ್ರಶ್ನೆ ಉತ್ತರಿಸಿದ ಮುಖ್ಯಮಂತ್ರಿಗಳು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸಚಿವರು ಅಂತಿಮ ಅಭಿಪ್ರಾಯ ಕೊಟ್ಟ ನಂತರ
ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಏರಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ತಿಳಿಸಿದರು. ಮೀಸಲಾತಿ ಏರಿಕೆಯಾಗಬೇಕಾದರೆ ಸಂವಿಧಾನಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಎಷ್ಟು ಪ್ರಮಾಣದಲ್ಲಿ ಏರಿಕೆ ಮಾಡಬೇಕೆಂದು ತಿಳಿಸಬಹುದು. ಆಗ ಸಂವಿಧಾನ ತಿದ್ದುಪಡಿ ಮಾಡಿ ಏರಿಕೆ ಮಾಡಬಹುದು ಎಂದರು.
ನೆಹರೂ ಬಗ್ಗೆ ಅಪಪ್ರಚಾರ:
ಧರ್ಮೇಂದ್ರ ಪ್ರಧಾನ್ ಅವರು ನೆಹರೂ ಅವರು ಹಿಂದೆ ಜಾತಿ ಗಣತಿಯನ್ನು ವಿರೋಧಿಸಿದ್ದರು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದೆಲ್ಲಾ ಸುಳ್ಳು ಹಾಗೂ ಅಪಪ್ರಚಾರ ಎಂದರು.
ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಸಮೀಕ್ಷೆಯನ್ನು ನಕಲು ಮಾಡುತ್ತಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದಾಗ ಕೇಂದ್ರ ಸರ್ಕಾರ ಅದನ್ನು ವಿರೋಧಿಸಿ, ಟೀಕಿಸಿತ್ತು. ಈಗ ಅದನ್ನೇ ಅವರೂ ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.