SUDDIKSHANA KANNADA NEWS/ DAVANAGERE/ DATE:22-08-2024
ದಾವಣಗೆರೆ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಹಾಗೂ ಪೂರ್ವ ಯೋಜಿತ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಬಿಜೆಪಿಯು ಪ್ರತಿಭಟನೆ ನಡೆಸಿತು.
ನಗರದ ಕೆ. ಬಿ. ಬಡಾವಣೆಯಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಿಂದ ಮೆರವಣಿಯಲ್ಲಿ ಹೊರಟ ಪ್ರತಿಭಟನಾಕಾರರು ಜಯದೇವ ವೃತ್ತ ತಲುಪಿದರು. ಇಲ್ಲಿ ಕಾಂಗ್ರೆಸ್ ನಾಯಕರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು
ರಾಜ್ಯಪಾಲರು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿಗಳ ವಿರುದ್ಧ ಖಾಸಗಿ ವ್ಯಕ್ತಿಗಳು ಮಾಡಿರುವ ಆರೋಪಗಳ ಬಗ್ಗೆ ಪ್ರಾಸಿಕ್ಯೂಷನ್ ಗೆ ನೀಡಿದ್ದರು. ತನಿಖೆಗೆ ಅನುಮತಿ ನೀಡಿದ ಕೂಡಲೇ ರಾಜ್ಯಪಾಲರ ವಿರುದ್ಧ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಬೆಂಬಲಿಗರು ಅತ್ಯಂತ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರಲ್ಲೂ ಅವರನ್ನು ವೈಯುಕ್ತಿಕವಾಗಿ ತೇಜೋವಧೆ ಮಾಡುತ್ತಿರುವುದು ಅತ್ಯಂತ ಖಂಡನೀಯ ಎಂದು ಹೇಳಿದರು.
ಮೊದಲಿನಿಂದಲೂ ಸಾಂವಿಧಾನಿಕ ಹುದ್ದೆಗಳಲ್ಲಿರುವವರನ್ನು ಅತ್ಯಂತ ಹೀನಾಯವಾಗಿ ನಡೆಸಿಕೊಂಡ ಕಾಂಗ್ರೆಸ್ ನಾಯಕರು ಈಗಲೂ ಅದೇ ಚಾಳಿಯನ್ನು ಮುಂದುವರೆಸಿದ್ದಾರೆ. ಅದರಲ್ಲೂ ರಾಜ್ಯದಲ್ಲಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಗೆ ಕಾರಣರಾದ ಹಾಗೂ ಮೂಡಾದ ನಿವೇಶನಗಳನ್ನು ತಮ್ಮ ಪತ್ನಿಗೆ ಅಕ್ರಮವಾಗಿ ವರ್ಗಾಯಿಸಿಕೊಳ್ಳುವ ಮೂಲಕ ನಾಡಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನತೆಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ನಾಯಕರು ಈಗ ಶೋಷಿತ ವರ್ಗಕ್ಕೆ ಸೇರಿದ ರಾಜ್ಯಪಾಲರ ಮೇಲೆ ಮುಗಿಬಿದ್ದಿರುವುದು ಕಾಂಗ್ರೆಸ್ ಪಕ್ಷದ ಶೋಷಿತ ಸಮುದಾಯದ ವಿರೋಧಿ ಪ್ರವೃತ್ತಿಯ ದ್ಯೋತಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರ ಹುದ್ದೆಯ ಘನತೆಯನ್ನು ಅರಿಯದ ಕಾಂಗ್ರೆಸ್ ನಾಯಕರುಗಳು ಅವರ ವಿರುದ್ಧ ಅವಹೇಳನಕಾರಿಯಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಹಾದಿ ಬೀದಿಯಲ್ಲಿ ಅವರ ಪ್ರತಿಕೃತಿಯನ್ನು ಸುಡುವಂತಹ ಹೀನಕೃತ್ಯಕ್ಕೆ ಇಳಿದಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಬಂದ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸುವುದು ರಾಜ್ಯಪಾಲರಿಗೆ ಸಂವಿಧಾನ ನೀಡಿರುವ ಅಧಿಕಾರ. ಇದು ಹಿಂದೆಯೂ ನಡೆದಿದೆ. ಹಿಂದೆ ಶ್ರೀ ಯಡಿಯೂರಪ್ಪನವರ ವಿಷಯದಲ್ಲಿ ಅಂದಿನ ರಾಜ್ಯಪಾಲರು ಆದೇಶ ನೀಡಿದ್ದಾರೆ. ಅತ್ಯಂತ ವಿವೇಚನಾಯುಕ್ತವಾಗಿ ಕಾನೂನು ತಜ್ಞರೊಡನೆ ಸಮಾಲೋಚಿಸಿ, ಪ್ರಕರಣದ ಸೂಕ್ಷ್ಮತೆ ಪರಾಮರ್ಶಿಸಿ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ನಡೆಯನ್ನು ಖಂಡಿಸುವುದು, ಅವರ ಪ್ರತಿಕೃತಿಯನ್ನು ಸುಡುವುದು ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಮಾಡುತ್ತಿರುವ ಅಪಮಾನ. ಇಂತಹ ಕೃತ್ಯಗಳನ್ನು ಪೊಲೀಸರ ಸಮ್ಮುಖದಲ್ಲಿಯೇ ಮಾಡುತ್ತಿರುವ ಕಾಂಗ್ರೆಸ್ ನಾಯಕರುಗಳ ಮೇಲೆ ಕ್ರಮಕೈಗೊಳ್ಳದೆ ಪೊಲೀಸ್ ಇಲಾಖೆ ನಿರ್ಲಕ್ಷ್ಯ ತಳೆದಿದೆ ಎಂದು ಆರೋಪಿಸಿದರು.
ಒಬ್ಬ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯಪಾಲರ ಬಗ್ಗೆ ಸಾರ್ವಜನಿಕವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ ಕೇಸುಗಳನ್ನು ದಾಖಲಿಸಬೇಕಾಗಿದೆ. ಇಂತಹ ಹೇಳಿಕೆಗಳು ಸಂವಿಧಾನಕ್ಕೆ ಮತ್ತು ಪರಿಶಿಷ್ಟ ಜನಾಂಗಕ್ಕೆ ಮಾಡಿದ ಅವಮಾನ. ಅಲ್ಲದೆ ಈ ತೆರನಾದ ಹೇಳಿಕೆಗಳು ಅತ್ಯಂತ ಸೂಕ್ಷ್ಮವಾಗಿದ್ದು. ಸಮಾಜವನ್ನು ಪ್ರಚೋದಿಸುವಂತಹ ಹೇಳಿಕೆಗಳಾಗಿದೆ. ಈ ರೀತಿಯ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯ ವಿರುದ್ಧದ
ಪ್ರತಿಭಟನೆ ಹಾಗೂ ಅವಹೇಳನಾಕಾರಿ ಹೇಳಿಕೆಗಳು ನಡೆಯುತ್ತಿದ್ದರೂ, ಕಾರಣರಾದ ವ್ಯಕ್ತಿಗಳ ವಿರುದ್ಧ ಒಂದೂ ಪ್ರಕರಣವೂ ದಾಖಲಾಗದಿರುವುದು ಪ್ರಕರಣದ ಗಂಭೀರತೆಯನ್ನು ಪೊಲೀಸ್ ಇಲಾಖೆ ಅರಿತಿಲ್ಲ ಎಂಬ ಅನುಮಾನಗಳು
ಸಾರ್ವಜನಿಕವಾಗಿಮೂಡಲು ಕಾರಣವಾಗುತ್ತದೆ ಎಂದು ಹೇಳಿದರು.
ಬಾಂಗ್ಲಾ ದೇಶದ ಪ್ರಧಾನಮಂತ್ರಿ ಶೇಖ್ ಹಸೀನಾಗೆ ಬಂದ ಗತಿ ತಮಗೂ ಬರುತ್ತದೆ, ನಾವು ಕಾಂಗ್ರೆಸ್ಸಿಗರು ರಾಜಭವನಕ್ಕೆ ನುಗ್ಗಿ ತಮ್ಮನ್ನು ಓಡಿಸುವ ಕೆಲಸವನ್ನು ಮಾಡುತ್ತೇವೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ರಾಜ್ಯಪಾಲರೇ ಕಾರಣ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಸಚಿವ ಕೃಷ್ಣಭೈರೇಗೌಡ, ದಿನೇಶ್ ಗುಂಡೂರಾವ್, ಶಾಸಕರಾದ ನಂಜೇಗೌಡ ಹಾಗೂ ಇನ್ನು ಅನೇಕ ಕಾಂಗ್ರೆಸ್ ಮುಖಂಡರ ವಿರುದ್ಧ ಜಾತಿ ನಿಂದನೆ ಹಾಗೂ ಗೂಂಡಾ ಕಾಯಿದೆಯಡಿ ತಕ್ಷಣ ಬಂಧಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ, ಪ್ರಧಾನ ಕಾರ್ಯದರ್ಶಿ ಧನಂಜಯ ಕಡ್ಲೇಬಾಳು, ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್, ದೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್, ವೀರೇಶ್ ಹನಗವಾಡಿ, ವೀಣಾ ನಂಜಪ್ಪ ಸೇರಿದಂತೆ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.