ದಾವಣಗೆರೆ: ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣವನ್ನು ತಡೆಗಟ್ಟುವಿಕೆಗೆ ಹಲವಾರು ಅಗತ್ಯ ಕ್ರಮಗಳನ್ನು ಕೈಗೊಂಡ ಪರಿಣಾಮ ಸಾಕಷ್ಟು ತಾಯಿ ಮತ್ತು ಶಿಶು ಮರಣ ಪ್ರಮಾಣ ಸುಧಾರಿಸಿದೆ. ಆದರೂ ಅಧಿಕಾರಿಗಳು ಜಿಲ್ಲೆಯಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮವಹಿಸಬೇಕು. ತಾಯಂದಿರ ಮರಣ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕಿದೆ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.
READ ALSO THIS STORY: ಪಡಿತರ ಫಲಾನುಭವಿಗಳಿಗೆ ಸಿಗಲಿದೆ ಆಹಾರ ಕಿಟ್: ಏನೇನು ಸಿಗುತ್ತೆ ಗೊತ್ತಾ?
ಅವರು ಜಿಲ್ಲಾ ಪಂಚಾಯಿತ್‌ನ ಎಸ್.ಎಸ್.ಮಲ್ಲಿಕಾರ್ಜುನ ಸಭಾಂಗಣದಲ್ಲಿ ಆಯೋಜಿಸಿದ್ದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು ಮತ್ತು ಶೌಚಾಲಯ ಕಡ್ಡಾಯವಾಗಿ ಹೊಂದಿರಬೇಕು. ಶೌಚಾಲಯ ಹೊಂದಿರದ ಅಥವಾ ದುರಸ್ತಿಯಾಗಿರುವ ಶೌಚಾಲಯಗಳನ್ನು ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಯಿಂದ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಯಿಂದ ದುರಸ್ಥಿಪಡಿಸಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲೆಗೆ ವಿಧ್ಯಾಭ್ಯಾಸಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬರುತ್ತಿದ್ದು ವಸತಿ ನಿಲಯಗಳ ಕೊರತೆ ಉಂಟಾಗಿದೆ. ಆದುದರಿಂದ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಐದು ವಸತಿ ನಿಲಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೂರು ವಸತಿ ನಿಲಯಗಳು ಮತ್ತು ಪರಿಶಿಷ್ಟ ಪಂಗಡದ ಎರಡು ವಸತಿ ನಿಲಯಗಳಿಗೆ ಮಂಜೂರಾತಿ ನೀಡುವಂತೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿರುವ ವಿಶೇಷ ಚೇತನರ ಗುರುತಿಸಿ, ಅದರಲ್ಲಿ ಪದವಿ ಪಡೆದ ಅರ್ಹ ವಿಶೇಷಚೇತನರಿಗೆ ಕೌಶಲ್ಯ ತರಬೇತಿ ನೀಡಿ, ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು. ಇದೇ ಸಂದರ್ಭದಲ್ಲಿ ಸ್ವ-ಸಹಾಯ ಸಂಘದ ಮಹಿಳೆಯರ ಸಬಲೀಸಕರಣಗೊಳಿಸಲು ದೀಪ ಸಂಜೀವಿನಿ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಿದರು.
ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾಂತನಗೌಡ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್‌ರಾವ್, ಅಪರ ಜಿಲ್ಲಾಧಿಕಾರಿ ಎಸ್. ಶಿವಕುಮಾರ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ದಿಶಾ ಸಮಿತಿ ಸದಸ್ಯರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.





