SUDDIKSHANA KANNADA NEWS/ DAVANAGERE/ DATE:16-02-2024
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡಿರುವ ಬಜೆಟ್ ಅಭಿವೃದ್ಧಿ ಪರ ಆಯವ್ಯಯ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶಕಲ್ಪಿಸಲಾಗಿದೆ ಎಂದು ಡಾ. ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗಿರುವುದು ಖುಷಿ ತಂದಿದೆ ಎಂದು ಎಸ್. ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.
ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು. ಒಟ್ಟಾರೆ ಇದೊಂದು ಅತ್ಯಂತ ಸಮತೋಲಿತ, ಅಭಿವೃದ್ಧಿ ಪರ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ಪ್ರತಿಕ್ರಿಯಿಸಿದ್ದಾರೆ.