ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಒಂದು ಮತದಿಂದ ಬಿಜೆಪಿ ಗೆದ್ದರೆ ತಾನು ರಾಜೀನಾಮೆ ನೀಡುವುದಾಗಿ ಹೇಳಿದ್ದರು.
ಅದೇ ರೀತಿ ಬಿಜೆಪಿ ಅಭ್ಯರ್ಥಿ ಡಾ ಕೆ.ಸುಧಾಕರ್ ಅವರು ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ನಿನ್ನೆ ರಾತ್ರಿ ಕಲ್ಲು ತೂರಾಟ ನಡೆದಿದೆ. ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಶಾಸಕ ಪ್ರದೀಪ್ ಮನೆಯ ಮೇಲೆ ಕಿಡಿಗೇಡಿಗಳು ನಿನ್ನೆ ರಾತ್ರಿ ಕಲ್ಲು ತೂರಿದ್ದಾರೆ. ಕಿಟಕಿ ಗಾಜು ಒಡೆದಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆಲುವು ಹಿನ್ನಲೆ ಕಲ್ಲು ತೂರಾಟ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿದ್ದಾರೆ. ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿರೋದು ಎಂದು ತಿಳಿಸಿದ್ದಾರೆ. Ad